ಕರ್ನಾಟಕಪ್ರಮುಖ ಸುದ್ದಿ

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅರಿವು ಮುಖ್ಯ : ಜಿಲ್ಲಾಧಿಕಾರಿ

ರಾಜ್ಯ(ಹಾಸನ) ಅ.5;- ಪ್ರತಿಯೊಬ್ಬರಿಗೂ ಕಾನೂನು ಅರಿವು ಹೊಂದಿರುವುದರ ಜೊತೆಗೆ ಹಕ್ಕು ಮತ್ತು ಕರ್ತವ್ಯದ ಬಗ್ಗೆ ತಿಳಿದುಕೊಂಡಿದ್ದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.

ನಗರದ ಹೇಮಾವತಿ ಪ್ರತಿಮೆ ಬಳಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಕ್ಟೋಬರ್ 2 ರಿಂದ ನವೆಂಬರ್ 14ರ ವರೆಗೆ ಹಮ್ಮಿಕೊಳ್ಳಲಾಗಿರುವ ಪ್ಯಾನ್ ಇಂಡಿಯಾ ಜಾಗೃತಿಯ ಕುರಿತಾಗಿ ಬೀದಿನಾಟಕ ಹಾಗೂ ಗೀತ ಗಾಯನದ ಮೂಲಕ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಒದಗಿಸುವಂತಹ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸುವಂತಹ ಕೆಲಸ ಆಗಬೇಕು ಎಂದರು.

ಬಹಳಷ್ಟು ಜನರು ಕಾನೂನು ಅರಿವಿನ ಕೊರತೆ ಹೊಂದಿದ್ದಾರೆ. ದೌರ್ಜನ್ಯಕ್ಕೆ ಒಳಗಾದವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಮಾನಸಿಕ ನ್ಯೂನತೆಯನ್ನು ಹೊಂದಿದವರು, ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರುವ ಎಲ್ಲಾ ವರ್ಗದ ಜಾತಿಯ ಜನರು ಉಚಿತವಾಗಿ ಕಾನೂನು ಸೇವೆ ಪಡೆಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಬಿ. ಕೆ ರವಿಕಾಂತ್ ಅವರು ಮಾತನಾಡಿ ಕಾನೂನು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಅಜ್ಞಾನ ಕ್ಷಮಾರ್ಹವಲ್ಲ ಎಂಬ ತತ್ವವಿದೆ ಹಾಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಸಾಮಾನ್ಯ ಜ್ಞಾನವಿರಬೇಕು ಎಂದರು.

ಕಾನೂನಿನ ಅರಿವು ಅಪರಿಮಿತವಾಗಿ ಜನರಲ್ಲಿ ಇರಬೇಕು. ಹೆಚ್ಚಿನ ಸಮಸ್ಯೆಗಳು ಹಳ್ಳಿಗಳಲ್ಲಿ ಕಂಡು ಬರುತ್ತಿರುವುದರಿಂದ ಇಂತಹ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡುವುದು ಉತ್ತಮ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ ಅವರು ಮಾತನಾಡಿ ಕಾನೂನಿನ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ವಿಚಾರವಾಗಿದ್ದು, ಕಾನೂನು ಪ್ರತಿಯೊಬ್ಬ ಮನುಷ್ಯನಿಗೂ ಬೇಕಾಗಿದು,್ದ ಅವರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಪಾಲನೆಗೂ ಸಹಕಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವಂತಹ ಅಪರಾಧಗಳು ಕಾನೂನು ಬಾಹಿರವಾಗಿದ್ದು, ಒಂದು ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಮುಖ್ಯ ಎಂದರು.

ಪ್ರತಿಯೊಬ್ಬ ಸಾರ್ವಜನಿಕರು ಕಾನೂನಿನ ಮಾಹಿತಿ ಪಡೆದು ಆರೋಗ್ಯಕರ ಸಮಾಜ ಕಟ್ಟಲು ಪ್ರತಿಯೊಬ್ಬರೂ ಪ್ರಯತ್ನಿಸೋಣ ಎಂದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಎಸ್ ಮಂಜುನಾಥ ಮೂರ್ತಿ, ಡಿ.ವೈ.ಎಸ್.ಪಿ ಪುಟ್ಟಸ್ವಾಮಿ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುದರ್ಶನ್, ಗ್ಯಾರಂಟಿ ರಾಮಣ್ಣ ಮತ್ತು ತಂಡದವರು, ಬಿ.ಟಿ ಮಾನವ ಮತ್ತು ತಂಡದವರು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: