ಕರ್ನಾಟಕಪ್ರಮುಖ ಸುದ್ದಿ

ಎರಡು ವರ್ಷಗಳ ಕಾಲ ಮೈಶುಗರ್ ಕಾರ್ಖಾನೆ ಸರ್ಕಾರದಿಂದಲೇ ನಡೆಸುವ ನಿರ್ಧಾರ : ಸಿಎಂ ಬೊಮ್ಮಾಯಿ

ರಾಜ್ಯ(ಬೆಂಗಳೂರು)ಅ.18: -ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಶಂಕರಪಾಟೀಲ್ ಮುನೇನಕೊಪ್ಪ, ಡಾ.ನಾರಾಯಣಗೌಡ, ಎಸ್.ಟಿ.ಸೋಮಶೇಖರ, ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮತ್ತಿತರರು ಭಾಗವಹಿಸಿದ್ದರು.

ನಷ್ಟದಲ್ಲಿರುವ ಮೈಸೂರಿನ ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಧಾನಸೌಧದಲ್ಲಿ ಸೋಮವಾರ ಮಂಡ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗದ ಜೊತೆ ನಡೆಸಿದ ಸಭೆಯಲ್ಲಿ ಎರಡು ವರ್ಷಗಳ ಕಾಲ ಮೈಶುಗರ್ ಕಾರ್ಖಾನೆಯನ್ನು ಸರ್ಕಾರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು , ಮೂರು ತಿಂಗಳಲ್ಲಿ ಮೈಶುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು. ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಶುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಯ ವ್ಯಾಪ್ತಿಯ ಕಬ್ಬನ್ನು ಖರೀದಿಸಿ ಬೇರೆ ಸಕ್ಕರೆ ಕಾರ್ಖಾನೆಗಳಿಗೆ ರವಾನಿಸಲು ನಿರ್ಧರಿಸಲಾಗಿದೆ. 2022ರಿಂದ ಪೂರ್ಣ ಪ್ರಮಾಣದಲ್ಲಿ ಕಬ್ಬು ಅರೆಯಲು ಸಿದ್ಧತೆ ಆರಂಭಿಸುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಆಡಳಿತ ನಿರ್ವಹಣೆ ಮತ್ತು ತಾಂತ್ರಿಕ ಸುಧಾರಣೆ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ನೇಮಿಸಲಾಗುವುದು. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಮೈ ಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಎರಡು ವರ್ಷಗಳ ಕಾಲ ಸರ್ಕಾರದ ನಿರ್ವಹಣೆಯಲ್ಲಿ ದೊರೆಯುವ ಫಲಿತಾಂಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರೈತರಿಗೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಾರ್ಖಾನೆ ಆರಂಭಕ್ಕೆ ತಕ್ಷಣದಿಂದಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: