ಮೈಸೂರು

ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ : ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು,ನ.30:- ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ನಾಯಕರುಗಳಿಗೆ ಇಲ್ಲ ಎಂದು ವರುಣ ಕ್ಷೇತ್ರ ಶಾಸಕ ಡಾ. ಯತಿಂದ್ರ ಸಿದ್ದರಾಮಯ್ಯನವರು ಬಿಜೆಪಿ ನಾಯಕರುಗಳ ಹೇಳಿಕೆಗೆ ತಿರುಗೇಟು ನೀಡಿದರು.

ಇಂದು ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ನಡೆಯುತ್ತಿದ್ದ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ನಾಯಕರುಗಳಾದ ಕೆ.ಎಸ್. ಈಶ್ವರಪ್ಪನವರು ಲಂಗುಲಗಾಮಿಲ್ಲದ ರೀತಿಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪರ್ಸೆಂಟೇಜ್ ಜನಕ ಕಾಂಗ್ರೆಸ್ ಎಂದು ಆರೋಪಿಸುತ್ತಾರೆ ಆದರೆ ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರ ಸಂಘದವರು 40 ಪರ್ಸೆಂಟ್ ಕಮಿಷನ್ ಕೇಳ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ  ಪ್ರಧಾನಮಂತ್ರಿ ಗಳಿಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಕಾಂಗ್ರೆಸ್ ಪಕ್ಷದವರು ಹೇಳಿದ್ದಲ್ಲ. ಸ್ವತಃ ಗುತ್ತಿಗೆದಾರರ ಸಂಘದವರೇ ಈ ಆರೋಪವನ್ನು ಮಾಡಿರುವುದು ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕರು ಕಿಡಿಕಾರಿದರು.

ಬಿಜೆಪಿ ಸರ್ಕಾರ ಬಂದು ಎರಡು ವರ್ಷ ಕಳೆದಿದ್ದು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಈ ರೀತಿ 40 ಪರ್ಸೆಂಟೇಜ್ ಕಮಿಷನ್ ಪಡೆದರೆ ನಡೆದಿರುವ ಕೆಲಸ ಉತ್ತಮ ಗುಣಮಟ್ಟದಿಂದ ಕೆಲಸ ನಡೆಯಲು ಸಾಧ್ಯವೇ ಎಂದು  ಪ್ರಶ್ನಿಸಿದರು. ರಾಜ್ಯದ ಜನತೆ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ ತಿರುಗಿ ಬಿದ್ದಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ರಾಜ್ಯ ಜನತೆ ಬಯಸಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ನಮ್ಮಲ್ಲಿ ಯಾವ ಬಣಗಳು ಇಲ್ಲ. ಬಿಜೆಪಿ ಪಕ್ಷದಲ್ಲಿ ಏಳೆಂಟು ಬಣಗಳು ಹುಟ್ಟಿಕೊಂಡಿವೆ. ಈಗಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಕೆಳಗಿಳಿಸಿ ಮತ್ತೊಬ್ಬರನ್ನು ಮುಖ್ಯಮಂತ್ರಿ ಮಾಡಲು ಹೊರಟಿರುವ ಬಿಜೆಪಿ ನಾಯಕರುಗಳು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಎನ್ ಚಂದ್ರು, ಲೇಬರ್ ಕಾಂಟ್ರಾಕ್ಟರ್ ಮಾಲಯ್ಯ, ಕಾರ್ಮಿಕ ಮುಖಂಡ ರವಿ ಸೇರಿದಂತೆ ಮತ್ತಿಿಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: