ಮೈಸೂರು

ಕನ್ನಡದ ಅಭಿವೃದ್ಧಿ: ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ ನಡೆಸಿದ ರಂದೀಪ್

ಮೈಸೂರು, ಮೇ 9: ಜಿಲ್ಲೆಯಲ್ಲಿ ಕನ್ನಡವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ತಮ್ಮ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾತೃಭಾಷೆ ಕನ್ನಡವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಕನ್ನಡವನ್ನು ಸಮರ್ಪಕವಾಗಿ ಜಾರಿ ಮಾಡಲು ನಿರ್ಧರಿಸಲಾಗಿದೆ. ಬೇರೆ ಭಾಷೆಗಳಿಗೆ ಆದ್ಯತೆ ನೀಡುವ ಬದಲು ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಂಘಸಂಸ್ಥೆಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕನ್ನಡದ ಅಭಿವೃದ್ಧಿಗೆ ಕಾರಣವಾಗಬೇಕು. ಯೋಜನೆಗಳನ್ನು ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಲಹೆ ಸೂಚನೆಗಳನ್ನು ನೀಡಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ, ಸಾರಾ ಸುದರ್ಶನ್, ಮಡ್ಡಿಕೆರೆ ಗೋಪಾಲ್, ಪ್ರಭಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: