ದೇಶಪ್ರಮುಖ ಸುದ್ದಿ

ಸೋನಿಯಾ, ರಾಹುಲ್ ವಿರುದ್ಧ ಆದಾಯ ತೆರಿಗೆ ತನಿಖೆಗೆ ಹೈಕೋರ್ಟ್ ಆದೇಶ

ದೇಶ (ಪ್ರಮುಖ ಸುದ್ದಿ) ನವದೆಹಲಿ, ಮೇ 12 :- ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ.

ಪಟಿಯಾಲ ನ್ಯಾಯಾಲಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋಟಿಸ್ ಜಾರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ, ಆದಾಯ ತೆರಿಗೆ ಇಲಾಖೆ ಮತ್ತಿತರ ಸಂಸ್ಥೆಗಳು ದಾಖಲೆ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ತಿಳಿಸಿತ್ತು. ಈ ತೀರ್ಪು ಪ್ರಶ್ನಿಸಿ ಸೋನಿಯಾ ಗಾಂಧಿಯವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್, ಪಟಿಯಾಲ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಲು ಸೂಚನೆ ನೀಡಿದೆ. ವಿಚಾರಣೆ ವೇಳೆ ಕೇವಲ ಸೋನಿಯಾ ಮತ್ತು ರಾಹುಲ್ ಗಾಂಧಿಯವರನ್ನಷ್ಟೇ ಅಲ್ಲದೆ, ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿರುವವರನ್ನು ವಿಚಾರಣೆಗೆ ಒಳಪಡಿಸುವಂತೆ ಆದೇಶಿಸಿ ತನಿಖೆಗೆ ಹಾದಿ ಮಾಡಿಕೊಟ್ಟಿದೆ.

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಹಣ ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದ ಕಾರಣ ಪ್ರಕರಣದ ವಿಚಾರಣೆ ನಡೆಯುತ್ತಿದೆ.

-ಎನ್.ಬಿ.ಎನ್.

Leave a Reply

comments

Related Articles

error: