ಸುದ್ದಿ ಸಂಕ್ಷಿಪ್ತ

ಮೇ.14-15: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಡಿಕೇರಿ, ಮೇ.12:- ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರು ಮೇ. 14 ಮತ್ತು 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಸಚಿವರು ಮೇ 14 ರಂದು ಬೆಳಗ್ಗೆ 11 ಗಂಟೆಗೆ ನಾಪೋಕ್ಲುವಿನಲ್ಲಿ ನಡೆಯುತ್ತಿರುವ ಬಿದ್ದಾಟಂಡ ಹಾಕಿ ನಮ್ಮೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕುಟ್ಟ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಕುಟ್ಟ-ಪೂಜೆಕಲ್ ಸೇತುವೆ ಉದ್ಘಾಟಿಸಲಿದ್ದಾರೆ. ನಂತರ ಕಾಯಿಮನೆ ಮಿನಿ ವಾಟರ್ ಯೋಜನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀಮಂಗಲ ಮತ್ತು ಕುಟ್ಟ ಗ್ರಾ.ಪಂ.ವ್ಯಾಪ್ತಿಯ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 4.30 ಗಂಟೆಗೆ ಬಿರುನಾಣಿಯಲ್ಲಿ ಗ್ರಾಮದಲ್ಲಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣವಾಗಿರುವ ಬಿರುನಾಣಿ-ಪೂಕಳೆ ರಸ್ತೆ ಹಾಗೂ ವಿದ್ಯುತ್ ಮಾರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ 5.30 ಗಂಟೆಗೆ ಪೊನ್ನಂಪೇಟೆಯಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯತ್ ಹಾಗೂ ಇತರೆ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ ಮೇ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿರುವ ಜನಮನ ಜನಾಭಿಪ್ರಾಯ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಮುಖ್ಯಮಂತ್ರಿಯವರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿ ಯುವಜನತೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯಕ್ಕಾಗಿ ವೆಬ್‍ಪೋರ್ಟಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕುಶಾಲನಗರದ ರೈತ ಭವನದಲ್ಲಿ ನಡೆಯುವ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕಾಂತರಾಜು ಅವರು ತಿಳಿಸಿದ್ದಾರೆ.

Leave a Reply

comments

Related Articles

error: