
ಕರ್ನಾಟಕಪ್ರಮುಖ ಸುದ್ದಿ
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ : ಡಾ. ಆರ್.ಸೆಲ್ವಮಣಿ
ರಾಜ್ಯ(ಶಿವಮೊಗ್ಗ), ಮೇ.20 : – ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ನೇಮಕಾತಿಗಾಗಿ ಮೇ 21ರಂದು 22ರಂದು ನಡೆಯುವ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಹಾಗೂ ಕೇಂದ್ರಗಳ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಸ್ಮಾರ್ಟ್ವಾಚ್, ಮೊಬೈಲ್ ಮುಂತಾದವುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಅವರು ಪರೀಕ್ಷಾ ಕಾರ್ಯಕ್ಕೆ ಹಾಜರಾಗುವವರು ಪರೀಕ್ಷಾ ಕೇಂದ್ರಗಳಲ್ಲಿ ತಮ್ಮ ಸಂಬಂಧಿಗಳು, ಇಲ್ಲದಿರುವ ಬಗ್ಗೆ ದೃಢೀಕರಣ ನೀಡಬೇಕು ಎಂದು ಸೂಚಿಸಿದರು.
ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶದ್ವಾರದಲ್ಲಿ ಪೊಲೀಸ್ ಇಲಾಖೆಯಿಂದ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪ್ರತಿ ಕೊಠಡಿಯು ಶುದ್ಧ ಗಾಳಿ, ಬೆಳಕು ಹೊಂದಿರುವಂತೆ ಹಾಗೂ ಕೊಠಡಿಯಲ್ಲಿ ಗೋಡೆ ಗಡಿಯಾರ ಹಾಗೂ ಸಿಸಿ.ಕ್ಯಾಮರಾ ಇರಬೇಕು. ಪ್ರತಿಯೊಬ್ಬ ಪರೀಕ್ಷಾರ್ಥಿಯನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ ಕೊಠಡಿ ಪ್ರವೇಶಕ್ಕೆ ಅನುಮತಿ ನೀಡಬೇಕು. ಅಭ್ಯರ್ಥಿಗಳು ಒಂದು ಗಂಟೆ ಮುಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಈಗಾಗಲೇ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ನಿಷೇಧಾಜ್ಞೆ: ಪರೀಕ್ಷೆ ನಡೆಯಲಿರುವ ಎಲ್ಲಾ 13ಕೇಂದ್ರಗಳ 200ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಪರೀಕ್ಷಾ ಕೇಂದ್ರದ ಹತ್ತಿರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಡಿಡಿಪಿಐ ಪರಮೇಶ್ವರಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)