ಕರ್ನಾಟಕಪ್ರಮುಖ ಸುದ್ದಿ

ಮುಂಗಾರು ಸಂದರ್ಭ ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ: ಡಾ.ಬಿ.ಸಿ.ಸತೀಶ

ರಾಜ್ಯ(ಮಡಿಕೇರಿ) ಮೇ.27:-ಮುಂಗಾರು ಸಂದರ್ಭದಲ್ಲಿ ಪ್ರವಾಹದಿಂದ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸುವಲ್ಲಿ ಅಗತ್ಯ ಮುನ್ನೆಚ್ಚರಿಕಾ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಸಂಬಂಧ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಬಳಿಯ ಹಾರಂಗಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ‘ಅಣಕು ಕಾರ್ಯಚರಣೆ’ಯು  ನಡೆಯಿತು.

ಮುಂಗಾರು ಸಂದರ್ಭದಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಸಂಭವಿಸುವ ಜನ-ಜಾನುವಾರು ರಕ್ಷಣೆ, ಮನೆ, ಆಸ್ತಿ-ಪಾಸ್ತಿ ನಷ್ಟ ತಪ್ಪಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.
ಪ್ರವಾಹ ಸಂಭವಿಸಿದ ಸಂದರ್ಭದಲ್ಲಿ ಸ್ಥಳೀಯರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ(1077) ಮಾಹಿತಿ ಬಂದ ತಕ್ಷಣ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಚಟುವಟಿಕೆ ಕೈಗೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಾಕೃತಿಕ ವಿಕೋಪ ಅಣಕು ಕಾರ್ಯಚರಣೆ ನಡೆಯಿತು.
ಮುಂಗಾರು ಸಂದರ್ಭದಲ್ಲಿ ಪ್ರವಾಹಕ್ಕೆ ಸಿಲುಕಿದಲ್ಲಿ ರಕ್ಷಣಾ ತಂಡವು ಲೈಫ್ ಜಾಕೇಟ್ ಬಳಸಿಕೊಂಡು ಹಗ್ಗದಿಂದ ರಕ್ಷಣೆ ಮಾಡುವುದು. ಮತ್ತಿತರ ಬಗ್ಗೆ ಅರಿವು ಮೂಡಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಮುಂಗಾರು ಸಂದರ್ಭದಲ್ಲಿ ಪ್ರವಾಹ ಸಂಭವಿಸಿದ್ದಲ್ಲಿ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಆ ನಿಟ್ಟಿನಲ್ಲಿ ಹಾರಂಗಿ ಹಿನ್ನೀರಿನ ಪ್ರದೇಶದಲ್ಲಿ ಅಗ್ನಿ ಶಾಮಕ ಮತ್ತು ಪೊಲೀಸ್ ಇಲಾಖೆಯಿಂದ ಅಣಕು ಪ್ರದರ್ಶನ ಕೈಗೊಳ್ಳಲಾಗಿದೆ ಎಂದರು.
ಮುಂದಿನ ವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡ ಜಿಲ್ಲೆಗೆ ಆಗಮಿಸಲಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡವು ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಕಾರ್ಯ ಪ್ರವೃತವಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈಗಾಗಲೇ 2018 ರಿಂದ ಮೂರು ವರ್ಷದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಭೂಕುಸಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ತಂಡಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲಿವೆ ಎಂದರು.
ಭಾರತೀಯ ಭೂ ವೈಜ್ಞಾನಿಕ ಸಮೀಕ್ಷಾ (ಜಿಎಸ್‍ಐ) ತಂಡದವರು ಸಹ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ವಲ್ನರಬಲ್ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸದ್ಯ ಜಿಲ್ಲಾ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ವತಿಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲು ಅಣಕು ಪ್ರದರ್ಶನ ಏರ್ಪಡಿಸಿ ಮಾಹಿತಿ ನೀಡಲಾಗಿದೆ ಎಂದರು.
ಗ್ರಾ.ಪಂ., ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ಸಮಿತಿಯನ್ನು ರಚಿಸಿ ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರವಾಹ ಹಾಗೂ ಭೂ ಕುಸಿತ ಉಂಟಾದಲ್ಲಿ ಅಂತಹ ಪ್ರದೇಶದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಲ್ಲಿ ಮಾಹಿತಿ ನೀಡಲಾಗುತ್ತಿದೆ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಬಂಧ ಈಗಾಗಲೇ ಜಿಲ್ಲೆಯ ಎಲ್ಲಾ ಹೋಬಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್ ಅವರು ಮಾತನಾಡಿ ಪ್ರವಾಹ ಸಂದರ್ಭದಲ್ಲಿ ಜನ ಮತ್ತು ಜಾನುವಾರುಗಳನ್ನು ಸಂರಕ್ಷಣೆ ಮಾಡುವಲ್ಲಿ ಅಗತ್ಯ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ. ಪ್ರವಾಹ ಸಂದರ್ಭದಲ್ಲಿ ಜನ-ಜಾನುವಾರು ರಕ್ಷಣೆ ಸಂಬಂಧ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ತಹಶೀಲ್ದಾರರು, ನೋಡಲ್ ಅಧಿಕಾರಿಗಳು ಇತರರು ಇದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: