ಕರ್ನಾಟಕಪ್ರಮುಖ ಸುದ್ದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಜಾರಿ : ಡಿಸಿ ಮಹಾಂತೇಶ ಬೀಳಗಿ

ರಾಜ್ಯ(ದಾವಣಗೆರೆ) ಮೇ.28:- ಹಳ್ಳಿಯ ಜೀವನ ಪದ್ಧತಿ, ಜನರ ಸಮಸ್ಯೆಗಳ ಅರಿತುಕೊಂಡು ಅಧಿಕಾರಿಗಳು ಕೆಲಸ ಮಾಡಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಶುಕ್ರವಾರ ಕಂದಾಯ ಇಲಾಖೆ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಮತ್ತು ಬೇಲಿಮಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡತನವನ್ನು ಓದುವುದು ಅಥವಾ ಕಲಿಯುವುದಕ್ಕಿಂತ ಸ್ವತಃ ತಾವೇ ಅನುಭವಿಸಿದವರಿಗೆ ಅದರಮೌಲ್ಯ ತಿಳಿಯುತ್ತದೆ, ಅಧಿಕಾರಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಯನ್ನು ಪಡೆದಿದ್ದರು ಕಚೇರಿ ಬಿಟ್ಟು ಹೊರಬರದೆ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಸರಕಾರದ ಎಲ್ಲಾ ಸೌಲಭ್ಯಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೇ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮವು ರಾಜ್ಯದ ಪ್ರತಿ ಜಿಲ್ಲೆ ತಾಲ್ಲೂಕಿನಲ್ಲಿ ಕ್ರಾಂತಿ ಮಾಡುತ್ತಿರುವ ಜನಸ್ಪರ್ಶಿ ಕಾರ್ಯಕ್ರಮವಾಗಿದೆ. ಗ್ರಾಮವಾಸ್ತವ್ಯ ಕಾರ್ಯಕ್ರಮದ ಮೂಲಕ ಸರ್ಕಾರದ ಅನೇಕ ಯೋಜನೆಗಳ ಸವಲತ್ತುಗಳನ್ನು ಹಾಗೂ ಮಂಜೂರಾತಿ ಪ್ರಮಾಣಪತ್ರಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ 105 ಜನರಿಗೆ ವಿವಿಧ ಸೌಲಭ್ಯಗಳ ಪ್ರಮಾಣಪತ್ರ ಹಾಗೂ 04 ಪೌತಿ ಖಾತೆ ಮಾಡಿದ ಪಹಣಿ ವಿತರಣೆ ಮಾಡಲಾಗುವುದು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದೆ ಎಂದು ಹೇಳಿದರು.
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಮಾತನಾಡಿ, ಹಿಂದೆ ಜನಸಾಮಾನ್ಯರು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರನ್ನು ಭೇಟಿಯಾಗಲು ಅಲೆದಾಡಬೇಕಿತ್ತು, ಜೊತೆಗೆ ಮಧ್ಯವರ್ತಿಗಳ ಹಾವಳಿ ಕೂಡ ಹೆಚ್ಚಾಗಿತ್ತು, ಈ ರೀತಿ ಅಲೆದಾಟಗಳನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ವಿವಿಧ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಇಂತಹ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿದೆ ಎಂದರು.
ಇತ್ತೀಚಿಗೆ ಅಕಾಲಿಕವಾಗಿ ಸುರಿದ ಬಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಲಾಗಿದೆ, ಮಳೆಯಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು. ಆಡಳಿತವನ್ನು ಸರಳೀಕರಣಗೊಳಿಸಿ ಹೊನ್ನಾಳಿ ನ್ಯಾಮತಿ ಅವಳಿ ತಾಲ್ಲೂಕುಗಳನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರಗಳಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಎರಡು ತಾಲ್ಲೂಕಿನ ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹಿರೇಗೋಣಿಗೆರೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಎಂ ಪಿ ರೇಣುಕಾಚಾರ್ಯ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿ.ಪಂ ಸಿಇಓ ಡಾ. ಎ. ಚನ್ನಪ್ಪ, ಹೊನ್ನಾಳಿ ತಹಶೀಲ್ದಾರ ರಶ್ಮಿ ಸೇರಿದಂತೆ ಇತರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವು ಗ್ರಾಮದ ವಿವಿಧ ಕಾಲೋನಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.
ವಿಶೇಷವಾಗಿ ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಹಾಗೂ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಪ್ರಮಾಣಪತ್ರಗಳು ಮತ್ತು ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಡಾ.ಎ.ಚನ್ನಪ್ಪ, ಹಿರೇಗೋಣಿಗೆರೆ ಗ್ರಾ ಪಂ ಅಧ್ಯಕ್ಷೆ ಅನಿತಾ. ಟಿ, ಬೇಲಿಮಲ್ಲೂರು ಗ್ರಾ ಪಂ ಅಧ್ಯಕ್ಷೆ ಸವಿತಾ, ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಡಿಎಚ್ಒ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರೇಷ್ಮಾ ಕೌಸರ್, ಹೊನ್ನಾಳಿ ತಹಶೀಲ್ದಾರ ರಶ್ಮಿ, ಶ್ರೀನಿವಾಸ್ ಚಿಂತಾಲ್ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು,ಗ್ರಾಪಂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: