ಕರ್ನಾಟಕಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ರಾಜ್ಯ (ಮಡಿಕೇರಿ) ಆ.12:-ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್, 12 ರಿಂದ 25 ರವರೆಗೆ ನಡೆಯುವ ಆಗಸ್ಟ್ 2022 ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವುದು, ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು. ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧ ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ, ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.(ಜಿ. ಕೆ, ಎಸ್. ಎಚ್)

Leave a Reply

comments

Related Articles

error: