ಮೈಸೂರು

ವಿದ್ಯಾರ್ಥಿಗಳು ಸಿಗುವ ಸೌಲಭ್ಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು : ವಿ.ಶ್ರೀನಿವಾಸ ಪ್ರಸಾದ್

ಮೈಸೂರು,ಮೇ.29:- ಅಶೋಕಪುರಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಕಲ ಸವಲತ್ತುಗಳಿವೆ. ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.
ಭಾನುವಾರ ವಿ.ಶ್ರೀನಿವಾಸ್‌ಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಅಶೋಕಪುರಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಹಾಗೂ 10ನೇ ತರಗತಿಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದಿರುವ ಮರಿಮಲ್ಲಪ್ಪ ಪ್ರೌಢಶಾಲೆಯ ದಿವ್ಯಶ್ರೀಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೇರೆ ಶಾಲೆಗಳಿಗೆ ಹೋಲಿಸಿದರೆ ಈ ಶಾಲೆಯಲ್ಲಿ ಉತ್ತಮ ಸೌಲಭ್ಯಗಳಿವೆ. ಆದರೆ ಇಲ್ಲಿನ ಪೋಷಕರು ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಮೊದಲು ಇಲ್ಲಿನ ಜನ  ಬದಲಾಗಬೇಕು. ರತ್ನ ಚಿತ್ರಮಂದಿರದ ಬಳಿ ನಿವೇಶನ ಖರೀದಿಸಿದ್ದು, ಈ ಶಾಲೆಯ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿನಿಲಯ ಆರಂಭಿಸಲಾಗುವುದು. ಇನ್ನು ಎರಡು ಮೂರು ವರ್ಷಗಳಲ್ಲಿ ಈ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಚಾಲಕ ಮ.ವೆಂಕಟರಾಮು, ಮಾನಸ ಗಂಗೋತ್ರಿ ಕಾನೂನು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಡಾ.ಸಿ.ಬಸವರಾಜು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್‌ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಬುದ್ಧ ವಿಹಾರದ  ಭಂತೇಜಿ, ಆದಿ ಕರ್ನಾಟಕ ಮಹಾಸಂಸ್ಥೆ ಮಾಜಿ ಅಧ್ಯಕ್ಷ ವಿ.ರಾಮಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ: ಬಿ.ಎಂ,ಎಸ್.ಎಚ್)

Leave a Reply

comments

Related Articles

error: