ಮೈಸೂರು

ಎಲ್ಲಾ ವರ್ಗಗಳ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ಯತೀಂದ್ರ

ಮೈಸೂರು, ಜೂ. 8: ದೇಶದಲ್ಲಿಯೇ ಪ್ರಥಮವಾಗಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಖಾಯಿದೆ ಜಾರಿಗೆ ತಂದು ಹೆಚ್ಚು ಹಣ ಖರ್ಚು ಮಾಡುತ್ತಿರುವ ಸರ್ಕಾರವೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ವರುಣಾ ಕ್ಷೇತ್ರದ ತಗಡೂರು, ಚಿನ್ನಂಬಳ್ಳಿ ಹಾಡ್ಯ, ಕಾರಾಪುರ ಕಾರ್ಯಗ್ರಾಮಗಳಲ್ಲಿ ಸುಮಾರು ೨ ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿಪೂಜೆ, ಉದ್ಘಾಟನೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ವರ್ಗದ ಬಡವರು, ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ ಆರ್ಥಿಕವಾಗಿ ಸಬಲರಾಗಲು ಅನುಕೂಲ ಮಾಡಿಕೊಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹಿಂದೆಂದೂ ಆಗದಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಯಾವುದೇ ಭ್ರಷ್ಟಾಚಾರ ಹಗರಣಗಳಿಲ್ಲದೆ ಯಶಸ್ವಿಯಾಗಿ ೪ ವರ್ಷ ಪೂರೈಸಿದೆ. ಉಳಿದ ಒಂದು ವರ್ಷದಲ್ಲಿ ವರುಣಾ ಕ್ಷೇತ್ರದಲ್ಲಿ ಆಗಬೇಕಾಗಿರುವಂತಹ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ತಹಸೀಲ್ದಾರ್ ದಯಾನಂದ್, ತಾ.ಪಂ ಸದಸ್ಯೆ ದೇವನೂರು ಮಹಾದೇವಮ್ಮ, ಚಿನ್ನಹಳ್ಳಿ ರಾಜು, ಸಿದ್ದರಾಮೇಗೌಡ, ಮಹೇಶ್ ಮಹೀ, ರಂಗಸ್ವಾಮಿ, ಶಿವಸ್ವಾಮಿ, ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: