ಮೈಸೂರು

ಡಿ.ಸಿ. ಕಚೇರಿ ನೂತನ ಕಟ್ಟಡ ಸೇರಿದಂತೆ ಹಲವು ಕಾಮಗಾರಿಗೆ ಸಿ.ಎಂ. ಸಿದ್ದರಾಮಯ್ಯ ಚಾಲನೆ

ಮೈಸೂರು: ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಆರೋಗ್ಯ ಹಾಗೂ ನಗರಾಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.

ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಜರ್ಮನ್ ಪ್ರೆಸ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೂಮಿ ಪೂಜೆ ನೆರವೇರಿಸಿ, ರಿಮೋಟ್ ಬಟನ್ ಒತ್ತುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ಇಂದು ‘ದೇಶದ ಸ್ವಚ್ಛ ನಗರ’ ಬಿರುದಿನ ಜೊತೆಗೆ ‘ಬಯಲು ಶೌಚ ಮುಕ್ತ ನಗರ’ ಬಿರುದನ್ನೂ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಿದೆ. ಇಂತಹ ಮೈಸೂರನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮೈಸೂರನ್ನಾಳಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವ, ಶಿಕ್ಷಣ, ನೀರಾವರಿ, ಕೃಷಿ, ಕೈಗಾರಿಕೆ, ಸಾಂಸ್ಕೃತಿಕ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯಿಂದ ಇಂದು ಮೈಸೂರು ವಿಶ್ವಮಟ್ಟದಲ್ಲಿ ಹೆಸರು ಮಾಡುತ್ತಿದೆ ಎಂದು ಹೇಳಿದರು.

ನಗರದ ಜನಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಹಾಗಾಗಿ ಸಾರ್ವಜನಿಕರಿಗೆ ಎಲ್ಲ ಕಚೇರಿಗಳು ಒಂದೇ ಸೂರಿನಡಿ ಲಭಿಸಲಿ ಎಂಬ ಉದ್ದೇಶದಿಂದ ಜರ್ಮನ್ ಪ್ರೆಸ್ ಆವರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲು ಶಂಕುಸ್ಥಾಪನೆ ನೆರೆವೇರಿಸಲಾಗಿದೆ. ಇದು 110 ಕೋಟಿಯ ಕಾಮಗಾರಿಯಾಗಿದ್ದು, ಮೊದಲನೇ ಹಂತದಲ್ಲಿ 70 ಕೋಟಿ ಬಿಡುಗಡೆ ಮಾಡಲಾಗಿದೆ. ನಗರದ ಜನಸಂಖ್ಯೆ 11 ಲಕ್ಷಕ್ಕೆ ಏರಿಕೆಯಾಗಿದ್ದು ಎಲ್ಲರಿಗೂ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರನ್ನು ಒದಗಿಸಲು ನರ್ಮ್ ಯೋಜನೆಯಡಿ 213.99 ಕೋಟಿ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಡೈರಿಯಿಂದ ರಿಂಗ್‌ರಸ್ತೆಯವರೆಗೆ 4 ಪಥದ ರಸ್ತೆ ಕಾಮಗಾರಿಗೆ ಟೆಂಟರ್ ಕರೆಯಲಾಗಿದ್ದು 30 ಕೋಟಿ ರೂ ವ್ಯಯಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಹೆಚ್.ಎಸ್. ಮಹದೇವಪ್ರಸಾದ್, ಪ್ರಾಥಮಿಕ  ಶಿಕ್ಷಣ ಸಚಿವ ತನ್ವೀರ್ ಸೇಠ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಮಂಜುನಾಥ್, ಮೇಯರ್ ಬಿ.ಎಲ್.ಭೈರಪ್ಪ, ಉಪ ಮೇಯರ್ ವನಿತಾ ಪ್ರಸನ್ನ, ಜಿಲ್ಲಾಧಿಕಾರಿ ಡಿ.ರಂದೀಪ್, ತಾಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: