ಕರ್ನಾಟಕ

ನಗರೋತ್ಥಾನ 3ನೇ ಹಂತದ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಮೋದನೆ

ರಾಜ್ಯ(ಮಡಿಕೇರಿ)ಜೂ.24:- ಜಿಲ್ಲೆಯ ನಗರಸಭೆ, ಮೂರು ಪಟ್ಟಣ ಪಂಚಾಯಿತಿಗಳ ನಗರೋತ್ಥಾನ ಮೂರನೇ ಹಂತದ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ  ಅನುಮೋದನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳ ನಗರೋತ್ಥಾನ ಮೂರನೇ ಹಂತದ ಕಾಮಗಾರಿಗೆ ಅನುಮೋದನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಮಾತನಾಡಿ ನಗರೋತ್ಥಾನ ಮೂರನೇ ಹಂತದಲ್ಲಿ ರಸ್ತೆ ಅಭಿವೃದ್ಧಿ ಜೊತೆಗೆ ತಡೆಗೋಡೆಯನ್ನು ಸೇರಿಸಲಾಗಿದೆ. ಇದು ಸರಿಯಲ್ಲ. ನಗರೋತ್ಥಾನ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿಗಾಗಿಯೇ ಮೀಸಲಿಟ್ಟು, ತಡೆಗೋಡೆ ನಿರ್ಮಾಣಕ್ಕೆ ಪ್ರತ್ಯೇಕವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸಲಹೆ ಮಾಡಿದರು. ನಗರೋತ್ಥಾನ ಯೋಜನೆಯಡಿ ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟ ನಿರ್ದೇಶನ ನೀಡಿದರು. ಸ್ಥಳೀಯ ಸಂಸ್ಥೆಗಳು ಜನರಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್, ಶೌಚಾಲಯ ಮತ್ತಿತರ ಮೂಲ ಸೌಲಭ್ಯ ಒದಗಿಸುವುದು ಪ್ರಥಮ ಆದ್ಯತೆಯಾಗಬೇಕು. ಆ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿಯೊಬ್ಬರಲ್ಲಿಯೂ ಪರಿಕಲ್ಪನೆ ಇರಬೇಕು. ಹಾಗಾದಾಗ ಮಾತ್ರ ನಗರದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರಪೇಟೆಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಿಲ್ಲ. ಇದರಿಂದ ಕಸ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅತೃಪ್ತಿ ವ್ಯಕ್ತಪಡಿಸಿದರು.
ಸರಿಯಾಗಿ ಕಸ ವಿಲೇವಾರಿ ಮಾಡದಿರುವುದರಿಂದ ನಗರದ ಸ್ವಚ್ಛತೆ ಸವಾಲಾಗಿ ಪರಿಣಮಿಸಿದೆ. ಆದ್ದರಿಂದ ಕಸ ವಿಲೇವಾರಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ನಗರಸಭೆ ಅಧಿಕಾರಿಗಳು ಕಾಲಮಿತಿಯೊಳಗೆ ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಒಂದು ತಿಂಗಳೊಳಗೆ ಘನ ತ್ಯಾಜ್ಯ  ವಿಲೇವಾರಿ ಘಟಕ ಸ್ಥಾಪಿಸುವಂತೆ ಅವರು ನಿರ್ದೇಶನ ನೀಡಿದರು. ನಗರೋತ್ಥಾನ ಮೂರನೇ ಹಂತದಲ್ಲಿ ಮಡಿಕೇರಿ ನಗರಸಭೆಗೆ 35 ಕೋಟಿ ರೂ., ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ತಲಾ 2 ಕೋಟಿ ರೂ. ಒಟ್ಟು 41 ಕೋಟಿ ರೂ. ಅಂದಾಜು ಪಟ್ಟಿ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಕಾಶ್ ಅವರು ಮಾಹಿತಿ ನೀಡಿದರು.
ಪ.ಪಂ.ಅಧ್ಯಕ್ಷರಾದ ಜೀವನ್(ವಿರಾಜಪೇಟೆ), ಚರಣ್(ಕುಶಾಲನಗರ), ವಿಜಯಲಕ್ಷ್ಮಿ(ಸೋಮವಾರಪೇಟೆ) ಅವರು ಹಲವು ಮಾಹಿತಿ ನೀಡಿದರು.
ಪ.ಪಂ.ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್(ವಿರಾಜಪೇಟೆ), ಶ್ರೀಧರ್(ಕುಶಾಲನಗರ), ನಾಚಪ್ಪ(ಸೋಮವಾರಪೇಟೆ) ಅವರು ಹಲವು ಮಾಹಿತಿ ನೀಡಿದರು.
ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ  ಪದ್ಮಿನಿಪೊನ್ನಪ್ಪ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಎಂಜಿಯರ್‍ಗಳಾದ ಅರುಣ್, ಶಿವಕುಮಾರ್, ವನಿತಾ, ಪವಿತ್ರ, ಮಂಜುಳಾ ಇತರರು ಇದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: