ಕರ್ನಾಟಕ

ತಾಲೂಕಿನ ಅಭಿವೃದ್ಧಿ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡುತ್ತಿರುವುದರಿಂದ ಸಿರಾ ಶೈಕ್ಷಣಿಕ ಕ್ಷೇತ್ರವಾಗಿ ಹೆಸರು ಗಳಿಸುತ್ತಿದೆ: ಟಿ.ಬಿ.ಜಯಚಂದ್ರ

ರಾಜ್ಯ(ತುಮಕೂರು)ಜೂ.26:- ಸಿರಾ ತಾಲೂಕಿನ ಅಭಿವೃದ್ಧಿ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡುತ್ತಿರುವುದರಿಂದ ಸಿರಾ ಶೈಕ್ಷಣಿಕ ಕ್ಷೇತ್ರವಾಗಿ ಹೆಸರು ಗಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ನಗರದ ಸೋಮೇಶ್ವರ ಕಲ್ಯಾಣ ಮಂಟರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿರಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕವಾಗಿ ಸಿರಾ ಉತ್ತಮ ಹೆಸರು ಪಡೆಯುತ್ತಿದೆ. ಸಿರಾದಲ್ಲಿರುವ ಮೊರಾರ್ಜಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಹೆಚ್ಚಿನ ಬೇಡಿಕೆ ಇದೆ. ಶೈಕ್ಷಣಿಕ ಬೆಳವಣಿಗೆಯಿಂದ ಮಾತ್ರ ಉತ್ತಮ ಸಾಧನೆ ಮಾಡಬಹುದು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕೋಲಾರದ ನಂದಿನಿ ಐಎಎಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿರುವುದು ಇತರರಿಗೆ ಮಾದರಿಯಾಗಬೇಕು ಎಂದರು. ಸರ್ಕಾರಿ ನೌಕರರ ಸಂಘದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಇದು ಇತರರಿಗೂ ಅನುಕರಣೀಯ ನಡೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಐಎಎಸ್ ಪರೀಕ್ಷೆಯಲ್ಲಿ 84ನೇ ರ್ಯಾಂಕ್ ಪಡೆದ ಪ್ರಿಯಾಂಕ, ಸತತ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ನಾವು ಎಷ್ಟು ಗಂಟೆ ಓದುತ್ತೇವೆ ಎನ್ನುವುದು ಮುಖ್ಯವಲ್ಲ. ಎಷ್ಟು ವಿಷಯ ಮನದಟ್ಟು ಮಾಡಿಕೊಂಡಿದ್ದೇವೆ ಎನ್ನುವುದು ಮುಖ್ಯ. ದಿನಪತ್ರಿಕೆಗಳನ್ನು ನಿರಂತರವಾಗಿ ಓದುವ ಮೂಲಕ ತಮ್ಮ ಜ್ಞಾನ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ ಹಾಗೂ ಜಿಲ್ಲಾ ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ಸಹಾಯಕ ಕೃಷಿ ನಿರ್ದೇಶಕ ಡಾ.ಎನ್.ನಾಗರಾಜು ಅವರನ್ನು ಅಭಿನಂದಿಸಲಾಯಿತು.
ಐಎಎಸ್ ಪರೀಕ್ಷೆಯಲ್ಲಿ 84ನೇ ರ್ಯಾಂಕ್ ಪಡೆದ ಪ್ರಿಯಾಂಕ ಹಾಗೂ ಸಿಇಟಿಯಲ್ಲಿ 34ನೇ ರ್ಯಾಂಕ್ ಗಳಿಸಿದ ಆರ್.ಅಂಜನಾ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್‌ಸಿಯಲ್ಲಿ ಶೇ. 90 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 85 ಅಂಕ ಗಳಿಸಿದ ಸಿರಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನಿರ್ಮಾಲಾ ಜಯಚಂದ್ರ, ತಹಶೀಲ್ದಾರ್ ಎಸ್.ಸಿ.ಹೊನ್ನಶ್ಯಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಾಜಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿರಾ ಶಾಖೆಯ ಅಧ್ಯಕ್ಷ ಬಿ.ಎಂ. ಲಕ್ಷ್ಮೀಶ್, ಪ್ರಾಂಶುಪಾಲರಾದ ಪಿ.ಎಚ್. ಮಹೇಂದ್ರಪ್ಪ, ಪಾಂಡುರಂಗಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್.ಶಶಿಧರ್‌ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್. ರವಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್.ಲೋಕೇಶ್, ಜಿಲ್ಲಾ ಗೌರವ ಅಧ್ಯಕ್ಷ ವಿ.ಕೆ.ವೀರಕ್ಯಾತರಾಯ, ರಾಜ್ಯ ಪರಿಷತ್ ಸದಸ್ಯ ಆರ್.ಅನಂತರಾಜು, ಪ್ರಧಾನ ಕಾರ್ಯದರ್ಶಿ ಈ. ದೊಡ್ಡಯ್ಯ, ತಾಲೂಕು ಗೌರವ ಅಧ್ಯಕ್ಷ ತಿಪ್ಪೇಸ್ವಾಮಿ, ಖಜಾಂಚಿ ಕೆ.ಎನ್.ರಮೇಶ್, ಯಶ್ವಂತ್, ಕಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: