ಕರ್ನಾಟಕ

ಸಾಲಮನ್ನಾ : ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ

ಮಡಿಕೇರಿ, ಜೂ.28 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಡರೈತನಿಗೆ ‘ಸಾಲಮನ್ನಾ’ ಸೌಲಭ್ಯ  ಒದಗಿಸಿರುವುದನ್ನು ಬೆಂಬಲಸಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್‍ನಿಂದ ನಗರದಲ್ಲಿ ಸಂಭ್ರಮಾಚರಣೆ ನಡೆಯಿತು.

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ರಮಾನಾಥ್, ಮಾಜಿ ಅಧ್ಯಕ್ಷ ನೆರವಂಡ ಉಮೇಶ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ಪರವಾದ ಘೋಷಣೆÉಗಳೊಂದಿಗೆ ನಗರದ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ಬೀದಿಗಳಲ್ಲಿ ತೆರಳಿ ಸಾರ್ವಜನಿಕರಿಗೆ ಸಿಹಿ ಹಂಚುವುದರ ಮೂಲಕ ಸರ್ಕಾರದ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿದರು. ಸಾಲ ಮನ್ನಾದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರೈತಾಪಿ ವರ್ಗದ ಬೆನ್ನೆಲುಬಾಗಿ ನಿಂತಿದೆ ಎಂದ ಕಾಂಗ್ರೆಸ್ ಪ್ರಮುಖರು, ಇದೇ ರೀತಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಬಡ ರೈತರ ಸಾಲ ಮನ್ನಾಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ರೈತರ ಸಾಲಮನ್ನಾ ಮಾಡಿರುವಂತೆ ಈಗಿನ ಪ್ರಧಾನಿ ಮೋದಿ ಅವರು ಸಾಲ ಮನ್ನಾಕ್ಕೆ ಮುಂದಾಗಬೇಕೆಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ್, ರಾಜ್ಯ ಸರ್ಕಾರ 50 ಸಾವಿರದವರೆಗಿನ ಸಾಲ ಮನ್ನಾ ಮಾಡುವ ಮೂಲಕ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಬಡ ರೈತನ ದುಃಖ ದುಮ್ಮಾನಗಳಿಗೆ ಸ್ಪಂದಿಸಿದೆಯೆಂದರು. ಜಿಲ್ಲಾ ಕಾಂಗ್ರೆಸ್ ಮಾಜಿ ವಕ್ತಾರ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಮಾಜದ ಎಲ್ಲಾ ವರ್ಗಗಳ ಜನರಿಗೆ ಅನುಕೂಲಕರವಾದ ಯೋಜನೆಗಳನ್ನು ಜಾರಿ ಮಾಡಿದ್ದು, ಇದೀಗ ರೈತ ಸಮೂಹಕ್ಕೆ ಸಾಲ ಮನ್ನಾ ಸೌಲಭ್ಯವನ್ನು ಒದಗಿಸಿದೆ ಎಂದು ಹೇಳಿದರು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: