ಕರ್ನಾಟಕಪ್ರಮುಖ ಸುದ್ದಿ

ಜೂ.30: ಸಾಲಮನ್ನಾ ಕುರಿತು ವಿರೋಧಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

ರಾಜ್ಯ(ತುಮಕೂರು)ಜೂ.28:- ರಾಜ್ಯ ಸರ್ಕಾರದ ರೈತರ ಸಾಲ ಮನ್ನಾ ಬಗ್ಗೆ ಕೇಂದ್ರದ ಎನ್‌ಡಿಎ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ನೀಡಿರುವ ವಿರೋಧಿ ಹೇಳಿಕೆ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಜೂ. 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮತ್ತು ತಾ.ಪಂ. ಸದಸ್ಯರು, ಜಿಲ್ಲಾ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಕೇಂದ್ರ ಬಿಜೆಪಿ ಸರ್ಕಾರವು ದೇಶದ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿಧಾನ ಮಂಡಲದ ಅಧಿವೇಶನದಲ್ಲಿ ರೈತರ ಮೇಲಿನ ಸಾಲ ಮನ್ನಾ ವಿಚಾರವಾಗಿ ನೀಡಿರುವ ರೈತ ವಿರೋಧಿ ಹೇಳಿಕೆ, ರೈತರ ಸಾಲವನ್ನು ಮನ್ನಾ ಮಾಡಲು ಹಣವನ್ನು ಎಲ್ಲಿಂದ ತರುವುದು? ನನಗೆ ಹಣವನ್ನು ಮುದ್ರಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದಿದ್ದಾರೆ. ಈ ಎಲ್ಲಾ ಹೇಳಿಕೆಗಳನ್ನು ಗಮನಿಸಿದಾಗ ಯಡಿಯೂರಪ್ಪನವರಿಗೆ ರೈತರ ಸಾಲ ಮನ್ನಾ ವಿಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದರು. ಬಿಜೆಪಿಯವರಿಗೆ ರೈತಪರವಾದ ನಿಜವಾದ ಕಾಳಜಿ ಇದ್ದರೆ ಕೇಂದ್ರಕ್ಕೆ ನಿಯೋಗ ತೆರಳಿ ಪ್ರಧಾನಮಂತ್ರಿಯವರ ಮನವೊಲಿಸಿ ರಾಷ್ಟ್ರೀಕೃತ ಬ್ಯಾಂಕ್‌‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಿಸಬೇಕು ಎಂದು ಒತ್ತಾಯಿಸಿದರು.
ಕೊರಟಗೆರೆಯಿಂದ ಪರಮೇಶ್ವರ್ ಸ್ಪರ್ಧೆ
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಕೊರಟಗೆರೆಯಿಂದಲೇ ಸ್ಪರ್ಧಿಸುತ್ತಾರೆ. ಈ ಕ್ಷೇತ್ರ ಬಿಟ್ಟು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ರಾಮಕೃಷ್ಣ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಜಿಲ್ಲೆಯ ಇಬ್ಬರು ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಿದ್ದು, ಮುಂದಿನ ಸಚಿವ ಸಂಪುಟ ಪುನಾರಚನೆ ವೇಳೆ ಮತ್ತಿಬ್ಬರು ಹಿರಿಯ ನಾಯಕರಾದ ಕೆ.ಎನ್. ರಾಜಣ್ಣ ಹಾಗೂ ಕೆ. ಷಡ‌ಕ್ಷರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೇವರಾಜು, ಎಪಿಎಂಸಿ ಅಧ್ಯಕ್ಷ ಅಶ್ವತ್ಥನಾರಾಯಣ್, ಮಂಜುನಾಥ್, ಜಿ.ಡಿ. ವಿಜಯಕುಮಾರ್, ನರುಗನಹಳ್ಳಿ ವಿಜಯಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: