ಪ್ರಮುಖ ಸುದ್ದಿ

ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಹೇರಿಕೆಗೆ ರಾಜ್ಯ ಸರ್ಕಾರ ಒಪ್ಪುವುದಿಲ್ಲ: ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ನವದೆಹಲಿ, ಜೂ.30: ಕೇಂದ್ರ ಸರ್ಕಾರ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಹೇರಿಕೆ ಮಾಡಲು ಮುಂದಾಗಿರುವ ಕ್ರಮವನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರವೇ ಹೆಚ್ಚು ಹಣ ಹೂಡಿಕೆ ಮಾಡಿದ್ದು, ಇದು ರಾಜ್ಯದ ಯೋಜನೆಯೇ ಹೊರತು ಕೇಂದ್ರದ್ದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಅವರು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಹಿಂದಿ ಭಾಷೆಯ ಹೇರಿಕೆಯನ್ನು ಸರ್ಕಾರ ಸಹಿಸುವುದಿಲ್ಲ. ಇದರ ವಿರುದ್ಧ ರಾಜ್ಯ ಸರ್ಕಾರ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಅಡಿಯಲ್ಲಿ ರಾಜ್ಯಗಳ ಮೇಲೆ ಹಿಂದಿ ಹೇರಲು ಬಯಸುತ್ತಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಹೋರಾಟ ಮಾಡಲಿದೆ. ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಹಿಂದಿಯನ್ನು  ದೇಶದ ಪ್ರತಿಯೊಬ್ಬರೂ ಕಲಿಯಬೇಕು ಎಂದು ಹೇಳಿದ್ದಾರೆ. ಆದರೆ ಹಿಂದಿ ಕೇವಲ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮಾತ್ರ ಮಾತನಾಡುತ್ತಾರೆ. ಬೇರೆ ರಾಜ್ಯಗಳಲ್ಲಿ ಹಿಂದಿ ಬಳಕೆ ಇಲ್ಲ. ಹಾಗಾಗಿ ನಾನು ಅವರ ಮಾತನ್ನು ಒಪ್ಪುವುದಿಲ್ಲ. ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಧೋರಣೆ ವಿರುದ್ಧ ತಮ್ಮನ್ನು ಬೆಂಬಲಿಸುವಂತೆ ಕೇಂದ್ರ ವಿರೋಧ ಪಕ್ಷಗಳೊಂದಿಗೆ  ಮಾತುಕತೆ ನಡೆಸಲಾಗುವುದು ಎಂದ ಅವರು, ಯಾವುದೇ ಕಾರಣಕ್ಕೆ ಹಿಂದಿ ಹೇರಿಕೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು. (ವರದಿ ಬಿ.ಎಂ)

 

Leave a Reply

comments

Related Articles

error: