ಕರ್ನಾಟಕಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ರಾಜ್ಯ(ಬೆಂಗಳೂರು)ಜು.6:- ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಶೀಘ್ರದಲ್ಲೇ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟಪಡಿಸಿದರು.

ದೇಶದ ಮಾಜಿ ಉಪ ಪ್ರಧಾನಿ ಡಾ. ಬಾಬುಜಗಜೀವನರಾಂ ಅವರ 31ನೇ ಪುಣ್ಯ ತಿಥಿಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಬಾಬುಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ದೇಶದ ಮಾಜಿ ಉಪಪ್ರಧಾನಿ ದಿ. ಡಾ. ಬಾಬುಜಗಜೀವನರಾಂ ಒಬ್ಬ ಮುತ್ಸದ್ಧಿ ರಾಜಕಾರಣಿ. ದಕ್ಷ ಆಡಳಿಗಾರರಾಗಿದ್ದರು. ದೇಶದಲ್ಲಿ ಹಸಿರುಕ್ರಾಂತಿ ಹಾಗೂ ಸಾಮಾಜಿಕ ಕ್ರಾಂತಿಗೆ ಕಾರಣರಾದವರು ಎಂದು ಜಗಜೀವನರಾಂ ಅವರ ಗುಣಗಾನ ಮಾಡಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಇತ್ತೀಚೆಗೆ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತು ವರಿಷ್ಠ ನಾಯಕರೊಂದಿಗೆ ಚರ್ಚಿಸಲು ಸಾಧ್ಯವಾಗಿಲ್ಲ. ಈ ಕಾರಣದಿಂದ ವಿಳಂಬವಾಗಿದೆಯೇ ಹೊರತು, ಆಷಾಢ ಮಾಸ ಎದುರಾಗಿರುವುದರಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ. ಆಷಾಢ, ಶ್ರಾವಣ, ರಾಹುಕಾಲ ಇಂತಹ ವಿಚಾರಗಳ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದು  ಹೇಳಿದರು. ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಈ ವಿಚಾರದಲ್ಲಿ ಯಾರಿಗೂ ಆತಂಕ, ಅನುಮಾನ ಬೇಡ  ಎಂದರು. ಪದೇ ಪದೇ ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳುತ್ತೀರಿ. ನಿಮ್ಮನ್ನು ಯಾರಾದರು ಬಂದು ಸಂಪುಟ ವಿಸ್ತರಣೆ ಮಾಡಿ ಎಂದು ಕೇಳಿದ್ದಾರಾ. ನನ್ನನ್ನಂತೂ ಯಾರು ಕೇಳಿಲ್ಲ ಎಂದು ಹಾಸ್ಯದ ಚಟಾಕಿ ಹಾರಿಸಿ ಕಳೆದ ಬಾರಿ ದೆಹಲಿಗೆ ಹೋದಾಗ ರಾಹುಲ್‌ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದರು. ಹಾಗಾಗಿ, ಅವರ ಭೇಟಿ ಸಾಧ್ಯವಾಗಲಿಲ್ಲ. ಅತಿ ಶೀಘ್ರದಲ್ಲೇ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ ಎಂದರು.
ಕೋರ್ಟ್‌ಗೆ ಹೋಗಲಿ ನಾನು ನೋಡುತ್ತೇನೆ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅವರ ವಿರುದ್ಧ ತಾವು ಟೀಕೆ ಮಾಡಿರುವುದಕ್ಕೆ ಕ್ಷಮೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ಗೆ ಹೋಗುತ್ತೇನೆ ಎಂದಿದ್ದಾರೆ, ಹೋಗಲಿ ನಾನು ನೋಡುತ್ತೇನೆ ಎಂದು ಸವಾಲಿನ ದಾಟಿಯಲ್ಲಿ ಹೇಳಿದರು. ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್‌ರವರ ಭೇಟಿಗೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅಡ್ಡಿಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಜೆಪಿಯವರು ಸಾಮಾಜಿಕ ನ್ಯಾಯ, ಸಮ ಸಮಾಜದ ವಿರೋಧಿಗಳು. ಅವರು ಏನು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದರು. ತಮಿಳುನಾಡು ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ ಮಳೆ ಇಲ್ಲ, ಹಾಗಾಗಿ, ರಾಜ್ಯದ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ ಎಂದರು. ಮಳೆಯೇ ಇಲ್ಲದೆ, ನೀರು ಇಲ್ಲದೇ ಇರುವಾಗ ನೀರು ಕೊಡಿ ಎಂದರೆ ಹೇಗೆ, ಈಗ ಬರುತ್ತಿರುವ ನೀರಿನಲ್ಲೆ ಅವರಿಗೂ ಸ್ವಲ್ಪ ನೀರನ್ನು ಕೊಡುತ್ತಿದ್ದೇವೆ. ಎಲ್ಲವನ್ನು ನ್ಯಾಯಾಲಯದ ಗಮನಕ್ಕೆ ತಂದು ರಾಜ್ಯದ ರೈತರ ಹಿತ ಕಾಯಲಾಗುವುದು ಎಂದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಸಂಸದ ಕೆ.ಹೆಚ್. ಮುನಿಯಪ್ಪ, ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: