ಮೈಸೂರು

ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು: ನಂಜುಂಡಸ್ವಾಮಿ

ಮೈಸೂರು, ಜು.೧೬: ವಿದ್ಯೆ ಸಮಾಜದಲ್ಲಿ ಗೌರವ ಸ್ಥಾನ ನೀಡಲಿದ್ದು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
ಭಾನುವಾರ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ನಾಯಕ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯೆ ಮನುಷ್ಯನನ್ನು ಪರಿಪೂರ್ಣರನ್ನಾಗಿ ಮಾಡುತ್ತದೆ. ವಿದ್ಯೆಗೆ ಬಡವ ಶ್ರೀಮಂತ ಎಂಬ ಬೇಧ ಭಾವವಿಲ್ಲ. ವಿದ್ಯೆ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದ್ದು, ವಿದ್ಯೆಯಿಂದ ವಂಚಿತರಾದರೆ ಸಮಾಜದಿಂದ ದೊರೆಯುವ ಗೌರವದಿಂದ ವಂಚಿತರಾಗುತ್ತಾರೆ. ಹಾಗಾಗಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಾಲ್ಮಿಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಸಂಜಯಕುಮಾರ್ ಮಹಾಸ್ವಾಮೀಜಿ, ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ಜಿಲ್ಲಾಧ್ಯಕ್ಷ ಶ್ರೀಧರ್ ಚಾಮುಂಡಿಬೆಟ್ಟ, ಮಹರ್ಷಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಪಿ.ದೇವರಾಜ್, ರಮ್ಮನಹಳ್ಳಿಯ ವೆಂಕಟಯ್ಯ, ಮಂಡ್ಯ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: