ಮೈಸೂರು

ಮಕ್ಕಳಿಗೆ ಅವರಿಷ್ಟದ ಕ್ಷೇತ್ರದಲ್ಲಿ ಮುಂದುವರಿಯಲು ಅವಕಾಶ ಕೊಡಿ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅತ್ಯಂತ ಮಹತ್ವದ್ದಾಗಿದ್ದು, ಪೋಷಕರು ಮಕ್ಕಳಿಗೆ ಒತ್ತಡ ಹೇರದೆ ಅವರಿಗೆ ಇಷ್ಟವಾದ ಕ್ಷೇತ್ರದಲ್ಲಿ ಮುಂದುವರಿಯಲು ಬೆಂಬಲವಾಗಿ ನಿಲ್ಲಬೇಕು ಎಂದು ಶಾಸಕ ಎಂ.ಕೆ.ಸೋಮಶೇಖರ್ ಸಲಹೆ ನೀಡಿದರು.

ಭಾನುವಾರ ನಗರದ ವೀಣೆ ಶೇಷಣ್ಣ ಭವನದಲ್ಲಿ ಅಭಿನವ ಸಾಂಸ್ಕೃತಿಕ ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ತಮ್ಮದೇ ಆದ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಹೊರಗೆಡವಲು ಉತ್ತಮ ವೇದಿಕೆಯನ್ನು ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಒದಗಿಸಬೇಕು. ಮಕ್ಕಳ ಮೇಲೆ ಮಾನಸಿಕ ಹಾಗೂ ದೈಹಿಕವಾಗಿ ಒತ್ತಡ ಹೇರದೆ ಅವರನ್ನು ಮುಕ್ತವಾಗಿ ಬಿಡಬೇಕು. ಸದಾ ಅವರ ಆಸೆ ಆಕಾಂಕ್ಷೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು. ಆಗ ಮಾತ್ರ ಅತ್ಯುತ್ತಮ ಸಾಧನೆಗಳು ಮೂಡಿಬರಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಬಳಿಕ ಮಾತನಾಡಿದ ಮೇಯರ್ ಬಿ.ಎಲ್.ಭೈರಪ್ಪ, ಇಂದು ಕುರುಬ ಸಮುದಾಯ ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸುವ ಮಟ್ಟಕ್ಕೆ ಬೆಳೆದುನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ರಾಜಕೀಯ ಕ್ಷೇತ್ರದಲ್ಲಿ ಛಾಪು ಮೂಡಿಸಿರುವುದು ಸಮುದಾಯಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದೆ. ಇಂದು ಎಲ್ಲಾ ಬೆಳವಣಿಗೆಗೂ ಶಿಕ್ಷಣ ಪ್ರಮುಖವಾಗಿರುವುದರಿಂದ ಮಕ್ಕಳಿಗೆ ಸ್ಫೂರ್ತಿ ನೀಡಿ ಮತ್ತಷ್ಟು ಸಾಧನೆಗೈಯುವಂತೆ ಪ್ರೇರೇಪಣೆ ನೀಡುವ ಸಲುವಾಗಿ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಿಜೆಪಿ ಮುಖಂಡ ಸಿ.ಹೆಚ್.ವಿಜಯಶಂಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು, ಸಿಂಡಿಕೇಟ್ ಸದಸ್ಯ ಜಯಣ್ಣ, ಜಿಲ್ಲಾ ಪಂಚಾಯತ್ ಸದಸ್ಯ ಬೀರಿಹುಂಡಿ ಬಸವಣ್ಣ, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Leave a Reply

comments

Related Articles

error: