ಮೈಸೂರು

ಯರಗಂಬಳ್ಳಿಯಲ್ಲಿ ಬಿಜೆಪಿಯಿಂದ ಸ್ವಚ್ಛತಾ ಅಭಿಯಾನ

ಯಳಂದೂರು: ಡಾ.ಬಿ.ಆರ್.ಅಂಬೇಡ್ಕರ್‌ರವರ 125 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್‌ರವರು ದೇಶ ಕಂಡ ಅಪ್ರತಿಮ ವ್ಯಕ್ತಿಯಾಗಿದ್ದು ಇವರನ್ನು ನೆನಪು ಮಾಡಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಇವರ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿಯು ಅಂಬೇಡ್ಕರ್‌ರವರ 125ನೇ ಜನ್ಮ ದಿನಾಚರಣೆಯನ್ನು ಬಹಳ ವಿಶಿಷ್ಟವಾಗಿ ಆಚರಿಸುವ ನಿಟ್ಟಿನಲ್ಲಿ ತಿಂಗಳಿಗೊಮ್ಮೆ ವಿಶಿಷ್ಟವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ಅವರ ಸಾಧನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ. ಅಂಬೇಡ್ಕರ್‌ರವರು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲ. ಬದಲಿಗೆ ಅವರು ಎಲ್ಲಾ ವರ್ಗದವರ ಹಿತದೃಷ್ಟಿಯಿಂದ ಸಂವಿಧಾನ ರಚನೆ ಮಾಡಿ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಲು ದಾರಿದೀಪವಾಗಿದ್ದಾರೆ. ಅವರ ಆದರ್ಶಗಳು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿವೆ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಸಾದ್ ಮಾತನಾಡಿ, ಬಿಜೆಪಿ ಪಕ್ಷವು ಎಲ್ಲ ವರ್ಗದವರಿಗೂ ಸಮಾನ ಅವಕಾಶ ನೀಡಿದ್ದು, ಪಕ್ಷದ ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯಕ್ಕಾಗಿ ದುಡಿಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ರಘು, ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಉಪಾಧ್ಯಕ್ಷರಾದ ನಂಜುಂಡಸ್ವಾಮಿ, ಶಶಿಧರ್, ತಾಲೂಕು ಮಂಡಲ ಉಪಾಧ್ಯಕ್ಷ ರಾಮಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಅಂಬಳೆ ಮನೋಹರ್, ಬಿಜೆಪಿ ಮುಖಂಡ ಅಗರ ರಾಜು, ಗ್ರಾಪಂ ಮಾಜಿ ಅಧ್ಯಕ್ಷ ಸೋಮಣ್ಣ, ಗ್ರಾಮದ ಶಿವಣ್ಣ, ರಂಗಸ್ವಾಮಿ, ಚಂದ್ರ, ರಾಜಣ್ಣ, ಸಿದ್ದರಾಜು, ಶಿವಶಂಕರ್ ಸೇರಿದಂತೆ ಇತರರು ಇದ್ದರು.

Leave a Reply

comments

Related Articles

error: