ಪ್ರಮುಖ ಸುದ್ದಿಮೈಸೂರು

ರುದ್ರೇಶ್ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ: ಎಸ್.ಎ.ರಾಮದಾಸ್

ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯನ್ನು ಖಂಡಿಸಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ಎಸ್.ಎ.ರಾಮದಾಸ್, ರಾಜ್ಯದಲ್ಲಿ ಮೇಲಿಂದ ಮೇಲೆ ದೇಶ ಭಕ್ತರ ಕೊಲೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ತನ್ನ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸುಮ್ಮನೆ ಕೈಕಟ್ಟಿ ಕುಳಿತಿದೆ. ಯಾರನ್ನೋ ಮೆಚ್ಚಿಸಲು ಇನ್ನೊಬ್ಬರ ಬಾಳಲ್ಲಿ ಚೆಲ್ಲಾಟವಾಡುತ್ತಿದೆ. ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಅಪರಾಧಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ಕಳೆದೆರಡು ವರ್ಷಗಳಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ಹತ್ಯೆ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಆದರೂ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಸಿ.ಹೆಚ್.ವಿಜಯ್‌ಶಂಕರ್, ಬಿಜೆಪಿ ನಗರಾಧ್ಯಕ್ಷ ಮಂಜುನಾಥ್, ಉಪ ಮೇಯರ್ ವನಿತಾ ಪ್ರಸನ್ನ, ಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್, ನಂದೀಶ್ ಪ್ರೀತಂ, ಮಾಜಿ ಮೂಡಾ ಅಧ್ಯಕ್ಷ ನಾಗೇಂದ್ರ, ಮಾರುತಿರಾವ್ ಪವಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

 

 

Leave a Reply

comments

Related Articles

error: