ಕರ್ನಾಟಕಮೈಸೂರು

ಡಿ.ದೇವರಾಜ ಅರಸು ಜನ್ಮ ದಿನಾಚರನೆ ಪ್ರಯುಕ್ತ ನಾಡಕುಸ್ತಿ ಪಂದ್ಯಾವಳಿ : ಜಿಲ್ಲಾಧಿಕಾರಿ ಡಿ.ರಂದೀಪ್

ಮೈಸೂರು, ಆ. 3 : ಜಿಲ್ಲಾಡಳಿತದ ವತಿಯಿಂದ ಡಿ.ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ತಿಳಿಸಿದರು.

ಅವರು ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಸೂಕ್ತ ಬಹುಮಾನ ನೀಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಡಿ. ದೇವರಾಜ ಅರಸು ಅವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಆಗಸ್ಟ್ 20 ರಂದು ಆಯೋಜಿಸುವಂತೆ ತಿಳಿಸಿದರು.

ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ನಾಡಕುಸ್ತಿ ಪಂದ್ಯಾವಳಿ ಆಯೋಜಿಸುವ ಬಗ್ಗೆ ಈಗಾಗಲೇ ಸಭೆ ನಡೆಸಲಾಗಿದ್ದು, 30 ಜೊತೆಗಳ ಕುಸ್ತಿ ಪಂದ್ಯಾವಳಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋಮಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

-ಎನ್.ಬಿ.

Leave a Reply

comments

Related Articles

error: