ಪ್ರಮುಖ ಸುದ್ದಿ

ಡಿಕೆಶಿ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ

ಪ್ರಮುಖ ಸುದ್ದಿ, ಮಂಡ್ಯ, ಆ.೩: ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸ-ಕಚೇರಿಗಳ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಖಂಡಿಸಿ ಮಂಡ್ಯ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೋದಿ ಭಾವಚಿತ್ರವನ್ನು ದಹನ ಮಾಡಿದರು. ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮಾತನಾಡಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷದ ರಾಜಕಾರಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದುದು. ದೇಶದೆಲ್ಲೆಡೆ ಬಿಜೆಪಿಯನ್ನು ವಿಸ್ತರಿಸಿಕೊಳ್ಳುವ ಉzಶದಿಂದ ಮೋದಿ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಾ, ಅದರ ವಿರುದ್ಧ ತಿರುಗಿಬಿದ್ದವರನ್ನು ಆದಾಯ ತೆರಿಗೆ ಅಧಿಕಾರಿಗಳ ಮೂಲಕ ದಾಳಿ ನಡೆಸಿ ಬೆದರಿಸುತ್ತಿದ್ದಾರೆ. ಇದು ಒಳ್ಳೆಯ ರಾಜಕಾರಣದ ಲಕ್ಷಣವಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಹೆಚ್.ಬಿ.ರಾಮು, ಜಿಪಂ ಮಾಜಿ ಅಧ್ಯಕ್ಷ ವಿವೇಕಾನಂದ, ನಗರಸಭಾ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಸಂಘದ ಜಿಲ್ಲಾಧ್ಯಕ್ಷ ದೇವಯ್ಯ (ಪಾಪಣ್ಣ), ಮುಖಂಡರಾದ ಶಿವನಂಜು, ಕಲ್ಲಹಳ್ಳಿ ನಾಗೇಂದ್ರ, ಮಾಜಿ ಸದಸ್ಯ ಹೆಚ್.ಕೆ.ರುದ್ರಪ್ಪ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: