ಮೈಸೂರು

ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ: ಧ್ರುವ ನಾರಾಯಣ್

ನಂಜನಗೂಡು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದು ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಸಂಸದ ಧ್ರುವ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಜೆ.ಎಲ್.ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ನಡೆದ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯನ್ನು ಸಂಸದ ಧ್ರುವ ನಾರಾಯಣ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಉಪ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಬರಬಹುದು. ಹೀಗಾಗಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ನಂಜನಗೂಡಿನಲ್ಲಿ ಕಾರ್ಯಕರ್ತರ ಸಮಾವೇಶ ಕರೆಯಲಾಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಈ ಚುನಾವಣೆಯ ಮೂಲಕ 2018 ರ ಚುನಾವಣೆಗೂ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದರು.

ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ. ಕಾಂಗ್ರೆಸ್ ನಿಂದ ನಾವೇ ವಿನಃ ನಮ್ಮಿಂದ ಕಾಂಗ್ರೆಸ್ ಪಕ್ಷವಲ್ಲ. ಪಕ್ಷಕ್ಕೆ ಹಲವಾರು ವರ್ಷಗಳ ಇತಿಹಾಸವಿದೆ. ಅದರ ತತ್ವಸಿದ್ದಾಂತಕ್ಕೆ ಬದ್ಧರಾಗಿರಬೇಕು ಎಂದು ತಿಳಿಸಿದರು.

ನಗರದಲ್ಲಿ ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣದ ಕುರಿತು ಹಾಗೂ ಅಂಬೇಡ್ಕರ್, ಇಂದಿರಾಗಾಂಧಿ ಜಯಂತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ, ಮಾಜಿ ಶಾಸಕ ಎಂ. ಸತ್ಯನಾರಾಯಣ, ಕೆಪಿಸಿಸಿ ಸದಸ್ಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: