ಮೈಸೂರು

ಅಭಿವೃದ್ಧಿ ಕಾರ್ಯಗಳಿಗೆ ಜಾತಿ ಸೀಮಿತವಾಗಬಾರದು: ನಂಜಾವಧೂತ ಮಹಾ ಸ್ವಾಮೀಜಿ

ಮೈಸೂರು, ಸೆ.೬: ಅಭಿವೃದ್ಧಿ ಕಾರ್ಯಗಳಿಗೆ ಜಾತಿ ಸೀಮಿತವಾಗಬಾರದು. ಜಾತಿಯನ್ನು ಮೀರಿ ಎಲ್ಲಾ ಸಂಘ ಸಂಸ್ಥೆಗಳು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ನಂಜಾವಧೂತ ಮಹಾ ಸ್ವಾಮೀಜಿ ತಿಳಿಸಿದರು.

ಬುಧವಾರ ನಗರದ ವಿಜಯನಗರದ ಮೊದಲ ಹಂತದಲ್ಲಿ ರಾಜ್ಯ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ವಿವಿಧ ಸಂಘಸಂಸ್ಥೆಗಳು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಸೇವೆ ಸಲ್ಲಿಸುತ್ತಿವೆ. ಈ ಮೂಲಕ ಸಮಾಜದ ಎಲ್ಲರಿಗೂ ಶಿಕ್ಷಣ ದೊರೆಯಬೇಕು ಎಂಬ ನಿಟ್ಟಿನಲ್ಲಿ ಶ್ರಮಿಸುತ್ತಿವೆ. ಸಂಘಸಂಸ್ಥೆಗಳು ಎಂದೂ ಒಂದು ಸಮುದಾಯಕ್ಕೆ ಸೀಮಿತವಾಗಬಾರದು. ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಬೇಕು. ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲೂ ಹೆಚ್ಚಾಗಬೇಕು. ಒಕ್ಕಲಿಗರ ಸಂಘ ಸಂಪದ್ಬರಿತವಾಗಿದ್ದು ಇನ್ನಷ್ಟು ಹೆಚ್ಚಿನ ಸಂಸ್ಥೆಗಳನ್ನು ನಿರ್ಮಾಣ ಮಾಡಿ ಉತ್ತಮ ಸೇವೆ ನೀಡಬೇಕು. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಎಲ್ಲಾ ಸಂಸ್ಥೆಗಳು ಒಂದಾಗಿ ತೋರಿಸಬೇಕು ಎಂದು ಹೇಳಿದರು.

ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿಗೌಡ, ಮಾಜಿ ಖಜಾಂಚಿ ಉಲ್ಲೂರು ಸಿ.ಮಂಜುನಾಥ್, ಮಾಜಿ ನಿರ್ದೇಶಕ ಜಿ.ಕೆ.ವರದಪ್ಪ, ಮಾಜಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: