
Uncategorized
ವಂಚನೆ ಪ್ರಕರಣ : ಉಪನ್ಯಾಸಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ(ಮಡಿಕೇರಿ) ಸೆ.21 :- ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಸುಮಾರು 40 ವಿದ್ಯಾರ್ಥಿನಿಯರಿಗೆ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರೊಬ್ಬರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ವಂಚನೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನ ಸಂಸ್ಥೆಯೊಂದರ ಹೆಸರು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬರು 40 ವಿದ್ಯಾರ್ಥಿನಿಯರಿಗೆ ಉದ್ಯೋಗ ದೊರಕಿಸಿ ಕೊಡುವುದಾಗಿ ಹೇಳಿ ವಂಚಿಸಿದ್ದಾರೆ. ಈ ಪ್ರಕರಣದಲ್ಲಿ ಕಾಲೇಜಿನ ಉಪನ್ಯಾಸಕರೊಬ್ಬರು ಶಾಮೀಲಾಗಿರುವ ಬಗ್ಗೆ ಆರೋಪವಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲವೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಆರೋಪ ಎದುರಿಸುತ್ತಿರುವ ಉಪನ್ಯಾಸಕರನ್ನು ತಕ್ಷಣ ಹುದ್ದೆಯಿಂದ ವಜಾ ಗೊಳಿಸಬೇಕು, ತಪ್ಪಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು. (ಕೆಸಿಐ,ಎಸ್.ಎಚ್)