ಕರ್ನಾಟಕಮೈಸೂರು

ಮಂಡ್ಯ : ಹೊಯ್ಸಳರ ಕಾಲದ ದೇವಾಲಯದಲ್ಲಿ ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಡ್ಯ, ಸೆ.22 : ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.27 ರಂದು ಅರ್ಥಪೂರ್ಣವಾಗಿ ಆಚರಿಸಲು ಗುರುವಾರ ನಡೆದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿರ್ಮಾನಿಸಲಾಯಿತು.

‘ಸುಸ್ಥಿರ ಪ್ರವಾಸೋದ್ಯಮ – ಅಭಿವೃದ್ಧಿಯ ಒಂದು ಸಾಧನ’ ಘೋಷವಾಕ್ಯದಡಿ 2017ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಮಂಡ್ಯ ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿರುವ ಹೊಯ್ಸಳರ ಕಾಲದ 13ನೇ ಶತಮಾನದ ಪ್ರಾಚೀನ ಶ್ರೀಅನಂತಪದ್ಮನಾಭ ದೇವಾಲಯದ ಆವರಣದಲ್ಲಿ ಮಂಡ್ಯ ಜಿಲ್ಲಾಡಳಿತದ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಕರೆಯಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಹರೀಶ್ ಅವರು ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಪ್ರವಾಸಿ ತಾಣಗಳಿವೆ. ರಾಜ್ಯವಲ್ಲದೇ, ಹೊರರಾಜ್ಯ ಹಾಗೂ ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ವಿಶ್ವದಲ್ಲೇ ಅತೀ ದೊಡ್ಡ ಉದ್ಯಮವಾಗಿ ಪ್ರವಾಸೋದ್ಯಮ ಹೊರಹೊಮ್ಮುತ್ತಿದೆ. ಈ ನಿಟ್ಟಿನಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ಪ್ರವಾಸಿ ತಾಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಹಮ್ಮಿಕೊಳ್ಳಲು ಮಂಡ್ಯ ಜಿಲ್ಲಾಡಳಿತ ನಿರ್ಧರಿಸಿದ್ದು, ಸಂಘ ಸಂಸ್ಥೆಗಳ, ಸ್ಥಳೀಯ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಶಿಷ್ಟಚಾರಂತೆ ಗಣ್ಯರಿಗೆ ಆಹ್ವಾನ ಪತ್ರಿಕೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮವಹಿಸಲಾಗುವುದು. ಮೆರವಣಿಗೆ ಮತ್ತು ಕಲಾ ತಂಡಗಳ ಜಾತಾ ಸಹ ಆಯೋಜಿಸಲಾಗುವುದು ಎಂದು ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಹೆಚ್ಚು ಅರ್ಥ ನೀಡಲು ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ ಏರ್ಪಡಿಸಲಾಗುವುದು. ಅಲ್ಲದೇ ಕಾಲೇಜು ವಿದ್ಯಾರ್ಥಿಗಳನ್ನು ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರದಲ್ಲಿ ತೊಡಗಿಸಿಕೊಳ್ಳಲಾಗುವುದು. ಇದ್ದಕ್ಕೆ ಕಾಲೇಜುಗಳ ರಾಷ್ಟ್ರೀಯ ಸೇವಾ ಘಟಕ ಅಧಿಕಾರಿಗಳು ಕ್ರಮವಹಿಸಲು ಮುಂದಾಗಬೇಕು ಎಂದು ಉಪ ನಿರ್ದೇಶಕರಾದ ಹರೀಶ್ ಅವರು ಕೋರಿದರು.

ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಮಲ್ಲಣ್ಣ, ಮುಖಂಡರುಗಳಾದ ಕೃಷ್ಣೇಗೌಡ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರುಗಳು ಹಾಗೂ ಇತರರು ಸಭೆಯಲ್ಲಿ ಭಾಗವಹಿಸಿದರು.

(ಎನ್.ಬಿ)

Leave a Reply

comments

Related Articles

error: