ಮೈಸೂರು

ಸೆ.೨೩ರಿಂದ ಅ.೨ರವರೆಗೆ ಸಾಬೂನು ಮೇಳ: ಸುವರ್ಣಕುಮಾರ್

ಮೈಸೂರು, ಸೆ.೨೨: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ರಿಯಾಯಿತಿ ದರದಲ್ಲಿ ಶುದ್ಧ ನೈಸರ್ಗಿಕ ಶ್ರೀಗಂಧದೆಣ್ಣೆಯುಕ್ತ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಡಿಜಿಎಂ ಸಿ.ಎಂ.ಸುವರ್ಣಕುಮಾರ್ ತಿಳಿಸಿದರು.
ಶುಕ್ರವಾರ ವಾರ್ತಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆ.೨೩ರಿಂದ ಅ.೨ರವರೆಗೆ ಜೆಎಲ್‌ಬಿ ರಸ್ತೆಯಲ್ಲಿರುವ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಸಾಬೂನು ಮೇಳೆ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮೇಳವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಾಸು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವ ತನ್ವೀರ್ ಸೇಠ್, ಸಂಸದ ಪ್ರತಾಪಸಿಂಹ, ಶಾಸಕ ಎಚ್.ಆರ್.ಆಲಗೂರ, ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಾಬೂನು ಮೇಳದಲ್ಲಿ ಸಂಸ್ಥೆ ಉತ್ಪಾದಿಸಿರುವ ೩೮ಕ್ಕೂ ಹೆಚ್ಚು ಉತ್ಕೃಷ್ಟ ದರ್ಜೆಯ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ವಿಶೇಷ ರಿಯಯಿತಿ ದರದಲ್ಲಿ ತಮಗೆ ಬೇಕಾದ ಉತ್ಪನ್ನಗಳನ್ನು ಖರೀದಿಸಬಹುದು. ನಮ್ಮ ಎಲ್ಲಾ ಉತ್ಪನ್ನಗಳ ಮೇಲೂ ಶೇ.೧೦ರಷ್ಟು ರಿಯಾಯಿತಿ ನೀಡುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದ ಅವರು, ನಮ್ಮ ಉತ್ಪನ್ನಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಮೇಳ ಆಯೋಜಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಆಯೋಜಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಡಿಜಿಎಂ ಉಮಾಶಂಕರ್ ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: