ಪ್ರಮುಖ ಸುದ್ದಿ

ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಸಚಿವ ಕೃಷ್ಣಪ್ಪ ಆಯ್ಕೆ

ಪ್ರಮುಖ ಸುದ್ದಿ, ಮಂಡ್ಯ, ಸೆ.೨೬:  ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.
ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಚಿವ ಕೃಷ್ಣಪ್ಪ ಅವರ ಅನುಪಸ್ಥಿತಿಯಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಎಂ. ಕೃಷ್ಣಪ್ಪ ಅವರನ್ನು ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಸಚಿವರು ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ಜಿ.ಪಂ. ಸಿಇಒ ಬಿ. ಶರತ್ ಘೋಷಿಸಿದರು.
ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆಗ ಯೋಜನೆಗಳನ್ನು ಕ್ರೋಢೀಕರಿಸಿ ಜಿಲ್ಲೆಗಾಗಿ ಒಂದು ಅಭಿವೃದ್ಧಿ ಯೋಜನಾ ಕರಡನ್ನು ತಯಾರಿಸಲು ಜಿಲ್ಲೆಗೊಂದು ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಪ್ರಕರಣ ೩೧೦ರಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಚುನಾವಣಾ ಪ್ರಕ್ರಿಯೆ ಮೂಲಕ ೮೦ ಮಂದಿ ಸಮಿತಿ ಸದಸ್ಯರನು ಸ್ಥಳೀಯ ಸಂಸ್ಥೆಗಳಿಂದ ಆಯ್ಕೆ ಮಾಡಲಾಗಿದೆ.
ಜಿ.ಪಂ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ತಾಲೂಕಿನ ತಾ.ಪಂ. ಅಧ್ಯಕ್ಷರು ಹಾಗೂ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಸಮಿತಿಯ ಖಾಯಂ ಸದಸ್ಯರಾಗಿದ್ದು, ಸಮಿತಿಯ ಅಧ್ಯಕ್ಷರ ಚುನಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಮಂಗಳವಾರ ಮಧ್ಯಾಹ್ನ ೧೨ ಗಂಟೆಯಿಂದ ೧೨.೩೦ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಅವರು ನಾಮಪತ್ರ ಸಲ್ಲಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಸವಿತಾ ವಿ.ಜೆ. ಅವರು ಸೂಚಕರಾಗಿದ್ದರು. ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾವಧಿಕಾರಿ ಬಿ. ಶರತ್ ಅವರು ಸಭೆಗೆ ಓದಿ ಹೇಳುವ ಮೂಲಕ ಕೃಷ್ಣಪ್ಪ ಅವರ ಆಯ್ಕೆಯನ್ನು ಪ್ರಕಟಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ. ಪ್ರೇಮಕುಮಾರಿ ಸಭೆಯಲ್ಲಿ ಭಾಗವಹಿಸಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: