ಕರ್ನಾಟಕ

ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆ

ಮಡಿಕೇರಿ ಅ.4 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ವಿಶ್ವವಿದ್ಯಾನಿಲಯದ ಅಂತರ ಕಾಲೇಜುಗಳ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆ ನಡೆಯಿತು.

ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ವಿಜ್ಞಾನದ ವಿವಿಧ ವಿಷಯಗಳ (ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ತ್ರ) ಕುರಿತು ಕನ್ನಡದಲ್ಲಿ ಉಪನ್ಯಾಸ ನೀಡಿದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಬಿ.ಎಸ್ಸಿ., ಪದವಿ ವಿದ್ಯಾರ್ಥಿಗಳಾದ ಟಿ.ವಿ.ಪೃಥ್ವೀಶ್, ಜಿ.ಶಿಮ್ಲ, ಶರೋಲ್ ಅಮ್ಮಣ್ಣ ಹಾಗೂ ಎಂ.ಎನ್.ಬೆನ್ ಬೋಪಯ್ಯ ಅವರು ಅಕ್ಟೋಬರ್ ಎರಡನೇ ವಾರದಲ್ಲಿ ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ, ವಿದ್ಯಾರ್ಥಿಗಳು ಮೂಲ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಉಪನ್ಯಾಸಕರ ಮಾದರಿಯಲ್ಲಿ ಉತ್ತಮವಾಗಿ ವಿಜ್ಞಾನ ವಿಷಯವನ್ನು ಮಂಡಿಸಿದ ಬಗ್ಗೆ ಅವರು ಪ್ರಶಂಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕರೂ ಆದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಮೂಲ ವಿಜ್ಞಾನ ಕಲಿಯಲು, ಪ್ರೇರೇಪಣೆ ನೀಡಲು ಹಾಗೂ ವಿಜ್ಞಾನವು ಜನ ಸಾಮಾನ್ಯರಿಗೆ ಅರ್ಥವಾಗುವಂತೆ ಮಾತೃ ಭಾಷೆಯಲ್ಲಿ ಸರಳವಾಗಿ ತಿಳಿಸುವ ಉದ್ದೇಶದಿಂದ ಇಂತಹ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ.ಎನ್.ರವಿಶಂಕರ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜೆ.ಜಿ.ಮಂಜುನಾಥ್, ವಿಜ್ಞಾನ ಶಿಕ್ಷಕ ಸಿ.ಎಸ್.ಸುರೇಶ್ ಇತರರು ಹಾಜರಿದ್ದರು.  (ವರದಿ: ಕೆಸಿಐ, ಎಲ್.ಜಿ)

 

 

 

Leave a Reply

comments

Related Articles

error: