ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ ನಾಯಕರು ಸಾವಿನಲ್ಲೂ ರಾಜಕಾರಣ ಮಾಡುತ್ತಿದ್ದಾರೆ ; ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ರಾಜ್ಯ(ಬೆಂಗಳೂರು)ಅ.14:- ಸಾವಿನಲ್ಲಿ ತಾವು ರಾಜಕಾರಣ ಮಾಡಬಯಸುವುದಿಲ್ಲ. ಆದರೆ ಬಿಜೆಪಿ ನಾಯಕರು ಇಂತಹ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಿನ್ನೆ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಗೆ ಕುರುಬರಹಳ್ಳಿಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟ ಕುಟುಂಬದವರನ್ನು ಶನಿವಾರ ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಈ ವಿಷಯ ತಿಳಿಸಿದರು. ಸಾವಿನ ಸಂದರ್ಭದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇವಲ ರಾಜಕೀಯ ಕಾರಣಕ್ಕೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಾರಿ ಹೆಚ್ಚು ಮಳೆ ಬಂದಿರುವುದೇ ಇದಕ್ಕೆಲ್ಲಾ ಕಾರಣ. ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಭಾರೀ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಎಡೆಬಿಡದ ಮಳೆಯಿಂದಾಗಿ ಪರಿಹಾರ ಕಾರ್ಯಗಳಿಗೂ ತೊಂದರೆಯಾಗಿದೆ. ಆದರೂ ಪರಿಹಾರ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ ಎಂದು ಹೇಳಿದರು. ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಛತಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ ಎಂದು ಹೇಳಿದರು. ಮಳೆಯ ಅನಾಹುತಗಳಿಗೆ ಕೇವಲ ರಾಜ್ಯ ಸರ್ಕಾರವನ್ನು ಹೊಣೆ ಮಾಡುವುದು ಎಷ್ಟು ಸರಿ, ಬಿಜೆಪಿ ಶಾಸಕರು ಮತ್ತು ನಗರ ಪಾಲಿಕೆ ಸದಸ್ಯರ ಜವಾಬ್ದಾರಿ ಏನೂ ಇಲ್ಲವೆ ಎಂದು ಪ್ರಶ್ನಿಸಿದರು. ಇದೇ ವೇಳೆ ಮಳೆ ಅನಾಹುತದಲ್ಲಿ ಮೃತರಾದ ಅರ್ಚಕ ವಾಸುದೇವ್ ಭಟ್ ಅವರ ನಿವಾಸಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಅವರು, ಇಂತಹ ಅನಾಹುತ ಆಗಬಾರದಾಗಿತ್ತು. ವಾಸುದೇವ್ ಭಟ್ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಸರ್ಕಾರ ಭರಿಸಲಿದೆ ಹಾಗೂ ಅವರ ಪತ್ನಿಗೆ ಉದ್ಯೋಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಳೆ ಅನಾಹುತಗಳು ಸಂಭವಿಸಿರುವ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಅವರೊಂದಿಗೆ ಸಚಿವರಾದ ಡಿ.ಕೆ. ಶಿವಕುಮಾರ್, ರಾಮಲಿಂಗಾ ರೆಡ್ಡಿ, ಶಾಸಕ ಗೋಪಾಲಯ್ಯ, ಮೇಯರ್ ಸಂಪತ್ ರಾಜ್, ಪಾಲಿಕೆ ಆಯುಕ್ತ ಮಂಜುನಾಥ್ ನಾಥ್ ಪ್ರಸಾದ್, ಮತ್ತಿತರರ ಅಧಿಕಾರಿಗಳು ಸಿಎಂ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: