ಕರ್ನಾಟಕಮೈಸೂರು

ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ : ಕಾನೂನು ಸುವ್ಯವಸ್ಥೆ ಪಾಲಿಸಲು ಸಿಎಂ ಅಧಿಕಾರಿಗಳಿಗೆ ಸೂಚನೆ

ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ಸಂಜೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಕುರಿತು ಪರಾಮರ್ಶೆ ನಡೆಸಿದರು. ಟಿಪ್ಪು ಜಯಂತಿಯನ್ನು ಕೆಲವರು ರಾಜಕೀಯಗೊಳಿಸಲು ಪ್ರಯತ್ನಿಸಿ ಈ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸಮಾಜದಲ್ಲಿ ಶಾಂತಿ ಕದಡುವ ಕಾರ್ಯಕ್ಕೂ ಮುಂದಾಗುತ್ತಿದ್ದಾರೆ. ಅದಕ್ಕೆ ಆಸ್ಪದ ನೀಡಬಾರದು ಎಂದು ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹೇಳಿದರು. ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಘಾತುಕ ಶಕ್ತಿಗಳನ್ನು ಬಂಧಿಸಿ ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುವ ಮತ್ತು ಪ್ರಚೋದಿಸುವ ವ್ಯಕ್ತಿಗಳ ಮೇಲೆ ನಿಗಾ ವಹಿಸಿ ಎಂದು ತಿಳಿಸಿದರು.

ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಬಂದೋಬಸ್ತ್ ಕುರಿತು ನಿಗಾವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ, ಸಲಹೆಗಾರ ಕೆಂಪಯ್ಯ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಿರ್ದೇಶಕ ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: