ಮೈಸೂರು

ಅಧ್ಯಯನಕ್ಕೆ ಸಂಬಂಧಿಸಿದ ಸಮಸ್ಯೆಗೆ ಉತ್ತರ ಪಡೆದುಕೊಳ್ಳಿ : ರಹಮತ್ ತರಿಕೆರೆ ಸಲಹೆ

ಮೈಸೂರು ವಿಶ್ವವಿದ್ಯಾನಿಲಯದ  ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಬಿ.ಎಂ.ಶ್ರೀ ಸಭಾಂಗಣದಲ್ಲಿ ಮಂಗಳವಾರ ಕುವೆಂಪು ಅಧ್ಯಯನ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳ  ಸಂಶೋಧನಾ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ರಹಮತ್ ತರಿಕೆರೆ ಮಾತನಾಡಿ ಎಲ್ಲ ವಿದ್ಯಾರ್ಥಿಗಳಲ್ಲೂ ಅಧ್ಯಯನಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರಲಿದೆ. ಈ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲರೊಂದಿಗೆ ವಿಚಾರ-ವಿಮರ್ಶೆಗಳನ್ನು ನಡೆಸಬೇಕಾಗುತ್ತದೆ. ಅದಕ್ಕಾಗಿಯೇ ಇಂತಹ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇಂತಹ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಸಮಸ್ಯೆಗಳಿಗೆ ಉತ್ತರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ತಾತ್ವಿಕ ಮತ್ತು ಪ್ರಾಯೋಗಿಕ ಸಮಸ್ಯೆಗಳನ್ನು ಸಮಾಲೋಚಿಸಬೇಕು. ಅಧ್ಯಯನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಕೆಲವರಿಗೆ ಸಂಶೋಧನೆ,ಅಧ್ಯಯನ ನಡೆಸುವಾಗ ಗೊಂದಲಗಳು ಸೃಷ್ಟಿಯಾಗುತ್ತವೆ. ಅವುಗಳ ಕುರಿತಾದ ಪ್ರಾಯೋಗಿಕ ಪ್ರಶ್ನೆಗಳನ್ನು ಕೇಳಿ ಗೊಂದಲಗಳನ್ನು ನಿವಾರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ.ಪ್ರೀತಿ ಶ್ರೀಮಂಧರ್ ಕುಮಾರ್, ಹಂಪಿ ಕನ್ನಡ ವಿವಿಯ ಕುರುಬನ ಕಟ್ಟೆ ದೇಶಿ ಬುಡಕಟ್ಟು ಅಧ್ಯಯನ ಕೇಂದ್ರದ ಪ್ರೊ.ಕೇಶವನ್ ಪ್ರಸಾದ್ ಉಪಸ್ಥಿತರಿದ್ದರು.

ಸಂವಾದದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮಲ್ಲಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆದುಕೊಂಡರು.

Leave a Reply

comments

Related Articles

error: