ಕರ್ನಾಟಕಪ್ರಮುಖ ಸುದ್ದಿ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ : ಎಚ್.ಡಿ. ರೇವಣ್ಣ

ಶಿವಮೊಗ್ಗ (ನ.2): ಜೆಡಿಎಸ್ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 140 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ. ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರತೆ ಇಲ್ಲ. ಸದ್ಯದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು. ಜೆಡಿಎಸ್‍ನಲ್ಲಿ ಅಭ್ಯರ್ಥಿ ಆಕಾಂಕ್ಷಿಗಳು ಸಾಕಷ್ಟು ಮಂದಿ ಇದ್ದಾರೆ. ಕಾಂಗ್ರೆಸ್‍ನಲ್ಲಿ ಅಭ್ಯರ್ಥಿ ಇಲ್ಲದಿದ್ದಕ್ಕೆ ಕಳೆದ ನಂಜನಗೂಡು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಹೈಜಾಕ್ ಮಾಡಲಾಯಿತು. ಆ ಪರಿಸ್ಥಿತಿ ನಮಗಿಲ್ಲ ಎಂದು ಕಾಂಗ್ರೆಸ್‍ಗೆ ಚುಚ್ಚಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲ ತಲೆದೋರಿದ ಪರಿಣಾಮ ಕೃಷಿಕರು ಸಂಕಷ್ಟಕ್ಕೆ ಈಡಾಗಿದ್ದಾರೆ. 1.83 ಕೋಟಿ ಅಡಿಕೆ ಮರ ಹಾಗೂ 44.56 ಲಕ್ಷ ತೆಂಗಿನ ಮರ ಸಂಪೂರ್ಣ ನಾಶವಾಗಿದೆ. ಇನ್ನಿತರ ಬೆಳೆಗಳು ಸೇರಿದಂತೆ ಸುಮಾರು 8 ಸಾವಿರ ಕೋಟಿ ಬೆಳೆ ನಷ್ಟವಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯೇ ವರದಿ ಸಲ್ಲಿಸಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೆರವಿಗೆ ಧಾವಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ತೆಂಗು, ಅಡಿಕೆ ಹಾಗೂ ಇನ್ನಿತರ ಬೆಳೆಗಳು ನಾಶವಾದ ಪರಿಣಾಮ ರೈತರು ತೊಂದರೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡದೇ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.

ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಸಿಎಂ ಅಭ್ಯರ್ಥಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಘೋಷಣೆ ಮಾಡಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದಲ್ಲಿ ತಮ್ಮನ್ನು ಸೇರಿದಂತೆ ಸಾಕಷ್ಟು ಮಂದಿ ಸಿಎಂ ಆಗುವ ಅರ್ಹತೆ ಉಳ್ಳವರು ಇದ್ಧಾರೆ. ಆದರೆ ಇದರಲ್ಲಿ ಗೊಂದಲ ಇಲ್ಲ. ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ 20 ತಿಂಗಳು ಉತ್ತಮ ಆಡಳಿತ ನೀಡಿದ ಅನುಭವವಿದೆ. ಮುಂದೆ ಅವರೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಾರೆ. ಅಧಿಕಾರಕ್ಕೆ ಬಂದ ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತಾರೆ ಎಂದರು.

ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

(ಎನ್‍ಬಿಎನ್‍)

Leave a Reply

comments

Related Articles

error: